ಬೆಂಗಳೂರು:ಉಪ ಮುಖ್ಯಮಂತ್ರಿಡಿ.ಕೆ.ಶಿವಕುಮಾರ್ ಅವರು ದಿಢೀರ್ ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರಿಗೆ ಔತಣಕೂಟ ಏರ್ಪಡಿಸಿರುವುದು ಕುತೂಹಲ ಮೂಡಿಸಿದೆ. ಡಿಸಿಎಂ ಅವರ ಸದಾಶಿವನಗರ ನಿವಾಸದಲ್ಲಿ ಗುರುವಾರ ರಾತ್ರಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಮುಖಂಡರ ಔತಣಕೂಟ ನಡೆಯಿತು.
ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಎನ್. ಚಲುವರಾಯಸ್ವಾಮಿ, ವೆಂಕಟೇಶ್, ಡಾ. ಎಂ.ಸಿ. ಸುಧಾಕರ್, ಮಾಜಿ ಸಂಸದ ಡಿ.ಕೆ. ಸುರೇಶ್ ಹಾಗೂ ಸಂಸದರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ಮೇಲ್ಮನೆ ಸದಸ್ಯರು, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಮುಖಂಡರು ಔತಣಕೂಟದಲ್ಲಿ ಪಾಲ್ಗೊಂಡಿದ್ದರು.
ಲೋಕಸಭೆ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯ ಕಾಂಗ್ರೆಸ್ ಕೈ ಹಿಡಿದಿಲ್ಲ ಎಂಬ ಲೆಕ್ಕಾಚಾರ, ಎಡವಿದ್ದೆಲ್ಲಿ ಎಂಬುದರ ಬಗ್ಗೆ ಈ ಸಂದರ್ಭದಲ್ಲಿ ಸಮುದಾಯದ ನಾಯಕರು ಪರಾಮರ್ಶೆ ನಡೆಸಿದ್ದಾರೆ ಎನ್ನಲಾಗಿದೆ. ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯ ಕೈಕೊಟ್ಟ ಬೆನ್ನಲ್ಲೇ ಅಲರ್ಟ್ ಆದ ಡಿ.ಕೆ. ಶಿವಕುಮಾರ್ ಅವರು, ಒಕ್ಕಲಿಗ ಸಚಿವರು, ಶಾಸಕರಿಗೆ ಔತಣಕೂಟ ಆಯೋಜಿಸುವ ಮೂಲಕ ಸಮುದಾಯದ ಸಚಿವರು, ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.