ಬೆಂಗಳೂರು: "ನಗರದಲ್ಲಿ ಕಟ್ಟಡಗಳ ಫಿಟ್ನೆಸ್ ಪ್ರಮಾಣ ಪತ್ರ, ವಿನ್ಯಾಸ ಸೇರಿದಂತೆ ಪಾಲಿಕೆಯಿಂದ ಅನುಮತಿ ತೆಗೆದುಕೊಳ್ಳದೇ ಕಟ್ಟಡ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಆದಷ್ಟು ಬೇಗ ಇದರ ಬಗ್ಗೆ ಸಮೀಕ್ಷೆ ಕಾರ್ಯ ನಡೆಸಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ನಗರದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಸ್ಥಳಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವರಾದ ಸಂತೋಷ್ ಲಾಡ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರ ಜೊತೆ ಭೇಟಿ ನೀಡಿ ರಕ್ಷಣಾ ಕಾರ್ಯವನ್ನು ವೀಕ್ಷಣೆ ಮಾಡಿದರು. ರಕ್ಷಣಾ ಕಾರ್ಯ ಹಾಗೂ ಕಾರ್ಮಿಕರ ಬಗ್ಗೆ ಚರ್ಚೆ ನಡೆಸಿದರು.
ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ, "60/40 ಅಳತೆಯ ನಿವೇಶನದಲ್ಲಿ ಇಷ್ಟು ದೊಡ್ಡ ಕಟ್ಟಡ ಕಟ್ಟಿರುವುದು ದೊಡ್ಡ ಅಪರಾಧ. ಅಧಿಕಾರಿಗಳು ಮೂರು ಬಾರಿ ನೋಟಿಸ್ ನೀಡಿದ್ದೇವೆ ಎಂದು ತಿಳಿಸಿದ್ದಾರೆ. ನೋಟೀಸ್ ನೀಡಿದರೆ ಸಾಲದು ಅದರ ಬದಲು ಕಠಿಣ ಕ್ರಮ ತೆಗೆದುಕೊಳ್ಳಬೇಕಿತ್ತು. ಇದು ನಮಗೆ ದೊಡ್ಡ ಪಾಠವಾಗಿದೆ. ರಕ್ಷಣಾ ಕಾರ್ಯ ಮುಗಿದ ನಂತರ ಮುಂದಿನ ಎರಡು ದಿನಗಳಲ್ಲಿ ಇದರ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು" ಎಂದರು.
"ನಗರದಾದ್ಯಂತ ಅಕ್ರಮ ಕಟ್ಟಡಗಳ ಬಗ್ಗೆ ಸರ್ವೆ ಕಾರ್ಯ ಮಾಡಲಾಗುವುದು. ಕಟ್ಟಡ ವಿನ್ಯಾಸ ಹೊಂದಿರದವರಿಗೆ ಯಾವುದೇ ಕಾರಣಕ್ಕೂ ನೋಂದಣಿ ಮಾಡಿಕೊಡಬಾರದು ಎಂದು ಕಂದಾಯ ಇಲಾಖೆಗೆ ಸೂಚನೆ ನೀಡಲಾಗುವುದು. ಕಡಿಮೆ ದುಡ್ಡಿಗೆ ನಿವೇಶನ ತೆಗೆದುಕೊಂಡು ಮಾರಾಟ ಮಾಡಲು ಈ ರೀತಿ ಮಾಡಲಾಗುತ್ತದೆ. ಇಂತಹ ಅಕ್ರಮಗಳನ್ನು ತಡೆಗಟ್ಟುವ ಕಾರಣಕ್ಕಾಗಿ ರೇರಾ ಕಾಯ್ದೆ ಜಾರಿಯಲ್ಲಿದೆ" ಎಂದರು.