ಮೈಸೂರು:ದಸರಾ ಹಬ್ಬದ ಪ್ರಮುಖ ಆಕರ್ಷಣೆ ದೀಪಾಲಂಕಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಸಂಜೆ ಚಾಲನೆ ನೀಡಿದ್ದಾರೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿನ ಹಸಿರು ಚಪ್ಪರದ ಆವರಣದಲ್ಲಿ ಗುರುವಾರ ಸಂಜೆ ನಡೆದ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದಸರಾ ವಿದ್ಯುತ್ ದೀಪಾಲಂಕಾರದ ಜತೆಗೆ "ಪವರ್ ಮ್ಯಾನ್"ಗಳ ಕರ್ತವ್ಯದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ಬಾರಿ ರೂಪಿಸಲಾಗಿರುವ ವಿದ್ಯುತ್ ರಥಕ್ಕೂ ಚಾಲನೆ ನೀಡಿದ್ದಾರೆ.
ಪ್ರತಿ ವರ್ಷದಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದಿಂದ ದಸರಾ ದೀಪಾಲಂಕಾರ ಮಾಡಲಾಗಿದ್ದು, ಹಿಂದಿನ ವರ್ಷಗಳಿಗಿಂತ ದೀಪಾಲಂಕಾರ ಇನ್ನಷ್ಟು ಆಕರ್ಷಕವಾಗಿದೆ.
130 ಕಿ.ಮೀ. ರಸ್ತೆಗೆ ದೀಪಾಲಂಕಾರ:ಈ ಬಾರಿ ಮೈಸೂರು ನಗರದ 130 ಕಿ.ಮೀ ವ್ಯಾಪ್ತಿಯ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಅರಮನೆ ಸುತ್ತಲಿನ ರಸ್ತೆಗಳು ಸೇರಿದಂತೆ ಸಯ್ಯಾಜಿರಾವ್ ರಸ್ತೆ, ಬಿಎನ್ ರಸ್ತೆ, ಇರ್ವಿನ್ ರಸ್ತೆ, ಅಲ್ಬರ್ಟ್ ವಿಕ್ಟರ್ ರಸ್ತೆ, ಜೆಎಲ್‌ಬಿ ರಸ್ತೆ, ಚಾಮರಾಜ ಜೋಡಿ ರಸ್ತೆ, ಹೊರ ವಲಯದಲ್ಲಿನ ಪ್ರಮುಖ ಹೆದ್ದಾರಿಗಳಿಗೂ ದೀಪಾಲಂಕಾರ ಮಾಡಲಾಗಿದೆ. ಜತೆಗೆ ನಗರ ವ್ಯಾಪ್ತಿಯಲ್ಲಿರುವ ಪ್ರಮುಖ ವೃತ್ತಗಳಿಗೂ ಆಕರ್ಷಕ ದೀಪಾಲಂಕಾರ ಮಾಡಲಾಗಿದೆ. ಇದಲ್ಲದೇ ನಗರದ ದೊಡ್ಡಕೆರೆ ಮೈದಾನ, ಕೆ.ಆರ್.ವೃತ್ತ, ಚಾಮರಾಜ ವೃತ್ತ, ಜಯಚಾಮರಾಜ ವೃತ್ತ(ಹಾರ್ಡಿಂಜ್), ರಾಮಸ್ವಾಮಿ ವೃತ್ತ, ರೈಲ್ವೆ ನಿಲ್ದಾಣ ಸಮೀಪ, ಗನ್‌ಹೌಸ್, ಎಲ್‌ಐಸಿ ವೃತ್ತ ಸೇರಿದಂತೆ ವಿವಿಧೆಡೆ ವಿದ್ಯುತ್ ದೀಪಗಳಿಂದಲೇ 65ಕ್ಕೂ ಹೆಚ್ಚು ಕಲಾಕೃತಿಗಳನ್ನು ನಿರ್ಮಿಸಲಾಗಿದೆ.
21 ದಿನಗಳ ಆಕರ್ಷಣೆ:ದಸರಾ ಹಿನ್ನೆಲೆಯಲ್ಲಿ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರ ಒಟ್ಟು 21 ದಿನಗಳ ಕಾಲ ನಡೆಯಲಿದೆ. ದಸರಾ ದೀಪಾಲಂಕಾರಕ್ಕೆ 6.50 ಕೋಟಿ ರೂ. ವೆಚ್ಚವಾಗುತ್ತಿದ್ದು, 2,881 ಕಿ.ವ್ಯಾ ಅಂದಾಜು ತಾತ್ಕಾಲಿಕ ವಿದ್ಯುತ್ ಸಂಪರ್ಕ ಭಾರ ಹಾಗೂ 2,42,012 ಯೂನಿಟ್‌ಗಳ ವಿದ್ಯುತ್ ಬಳಕೆ ಮಾಡಲಾಗುತ್ತಿದೆ.