ಹುಬ್ಬಳ್ಳಿ :ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲಿಂಗಾಯತ ಮತ್ತು ಉಳಿದ ಸಮಾಜವನ್ನು ತುಳಿಯುತ್ತಿದ್ದಾರೆ. ಸ್ವಾಮೀಜಿಗಳನ್ನು ಅಪಮಾನಗೊಳಿಸಿದ್ದಾರೆ. ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ಅವರಿಗೆ ನೀಡಿರುವ ಟಿಕೆಟ್ ಅನ್ನು ಬಿಜೆಪಿ ವರಿಷ್ಠರು ಮಾ. 31ರೊಳಗೆ ಬದಲಾವಣೆ ಮಾಡಬೇಕು ಎಂದು ಶಿರಹಟ್ಟಿಮಠದ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಆಗ್ರಹಿಸಿದ್ದಾರೆ.
ಮೂರು ಸಾವಿರಮಠದ ಆವರಣದಲ್ಲಿ ವಿವಿಧ ಸ್ವಾಮೀಜಿಗಳೊಂದಿಗೆ ಚಿಂತನ - ಮಂಥನ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಬದಲಾವಣೆ ಆಗದಿದ್ದರೆ, ಏಪ್ರಿಲ್ 2 ರಂದು ಮತ್ತೊಮ್ಮೆ ಸಭೆ ನಡೆಸಿ, ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಪ್ರಹ್ಲಾದ್ ಜೋಶಿ ಅವರಿಗೆ ಅಧಿಕಾರ ಮತ್ತು ಸಂಪತ್ತಿನ ಮದವೇರಿದ್ದು, ಲಿಂಗಾಯತ, ಕುರುಬ ಸೇರಿದಂತೆ ಎಲ್ಲ ಸಮುದಾಯವನ್ನು ತುಳಿದಿದ್ದಾರೆ. ಸ್ವಾಮೀಜಿಗಳನ್ನು ಅವಮಾನಿಸಿದ್ದಾರೆ. ನಮ್ಮ ವಿರೋಧ ಅವರ ವ್ಯಕ್ತಿತ್ವಕ್ಕೆ ಹೊರತು, ಪಕ್ಷ ಅಥವಾ ಸಮಾಜಕ್ಕೆ ಅಲ್ಲ ಎಂದು ಇದೇ ವೇಳೆ ಶ್ರೀಗಳು ಸ್ಪಷ್ಟಪಡಿಸಿದರು.
ಕೇಂದ್ರ ಸಚಿವರು ಏಕಸ್ವಾಮ್ಯತ್ವವನ್ನು ಸಾಧಿಸುತ್ತಿದ್ದಾರೆ. ಹೀಗಾಗಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಯನ್ನು ಹಾಕಬೇಕು ಎಂದು ಬಿಜೆಪಿ ಹೈಕಮಾಂಡ್ಗೆ ಶ್ರೀಗಳು ಗಡುವು ನೀಡಿದ್ದಾರೆ. ಏ. 2 ರಂದು ಜೋಶಿ ಅವರ ಕ್ಷೇತ್ರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ನೂರಾರು ಮಠಾಧೀಶರ ಸಮ್ಮುಖದಲ್ಲಿ ಸಭೆ ನಡೆಸಲಾಗುವುದು. ಮತ್ತೊಮ್ಮೆ ಸಭೆ ನಡೆಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಶ್ರೀಗಳು ತಿಳಿಸಿದ್ದಾರೆ.