ಬೆಂಗಳೂರು: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇ-ಸ್ವತ್ತು ಸಮಸ್ಯೆ ಇರುವುದು ಸರಕಾರದ ಗಮನಕ್ಕೆ ಬಂದಿದೆ. ಕಂದಾಯ ಇಲಾಖೆಯ ಸಚಿವರ ಜೊತೆಗೂಡಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು. ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿ ತಿಳಿಸಿದರು.
ಇಂದು ಪ್ರಶ್ನೋತ್ತರ ಕಲಾಪದ ವೇಳೆ ಚಿಕ್ಕಮಗಳೂರು ಶಾಸಕ ತಮ್ಮಯ್ಯ ಎಚ್.ಡಿ. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2,543 ಪ್ರಕರಣಗಳಿವೆ. ಕ್ಷೇತ್ರದ ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಗ್ರಾ.ಪಂಚಾಯತ್ ಅಧ್ಯಕ್ಷ, ಗ್ರಾಮ ಠಾಣಾ ಮತ್ತು ಆಶ್ರಯ ಯೋಜನೆ ಎಂದು ಪಹಣಿಯಲ್ಲಿ ನಮೂದಾಗಿರುವುದು, ಇಲ್ಲಿ ಸಾರ್ವಜನಿಕರು ಮನೆ ಕಟ್ಟಿಕೊಂಡು ವಾಸ ಮಾಡುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ ಎಂದರು.
ಪ್ರಸ್ತುತ ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿನ ಕ್ರಮಬದ್ಧ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11 ಎಯನ್ನು ಪಡೆಯಲು ಆಸ್ತಿಯ ಮಾಲೀಕರು ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿದಲ್ಲಿ ಪಿಡಿಒ ಅವರು ಡಿಜಿಟಲ್ ಸಹಿಯ ಮೂಲಕ ನಮೂನೆ-09 ಮತ್ತು 11 ಎ ವಿತರಿಸುತ್ತಾರೆ. ಕ್ರಮಬದ್ಧವಲ್ಲದ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ನಮೂನೆ 11ಬಿಯನ್ನು ಪಡೆಯಲು ಆಸ್ತಿಯ ಮಾಲೀಕರು ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿದಲ್ಲಿ ಪಿಡಿಒ ಅವರು ಡಿಜಿಟಲ್ ಸಹಿಯ ಮೂಲಕ ನಮೂನೆ 11ಬಿ ವಿತರಿಸುತ್ತಾರೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ವಿತರಿಸುವುದಕ್ಕೆ ವಿನಾಯಿತಿ ನೀಡಿ ನಮೂನೆ 11ಬಿಯನ್ನು ಕೈಬರಹದ ಮೂಲಕ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಸುಸಜ್ಜಿತ ಕ್ರೀಡಾ ಸಿಟಿ ನಿರ್ಮಾಣ:ಯಲಹಂಕ ತಾಲೂಕು ಹೆಸರಘಟ್ಟ ಹೋಬಳಿಯ ಮಾವಳ್ಳಿಪುರ ಬಳಿ 100 ಎಕರೆ ಪ್ರದೇಶದಲ್ಲಿ ಕ್ರೀಡಾಸಿಟಿಯನ್ನು (ಸ್ಪೋರ್ಟ್ಸ್ ಸಿಟಿ) ನಿರ್ಮಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಬಿ.ನಾಗೇಂದ್ರ ಅವರು, ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ ಪ್ರಶ್ನೆಗೆ ಉತ್ತರಿಸಿದರು. ಮಾವಳ್ಳಿಪುರ ಬಳಿ 60 ಎಕರೆ ಜಮೀನು ನೀಡಲು ಕಂದಾಯ ಇಲಾಖೆ ಒಪ್ಪಿಕೊಂಡಿದ್ದು ಇದರ ಜೊತೆಗೆ ಇನ್ನೂ ಹೆಚ್ಚುವರಿಯಾಗಿ 40 ಎಕರೆ ಜಾಗ ನೀಡುವಂತೆ ಕೇಳಿಕೊಳ್ಳಲಾಗಿದೆ.