ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕಾನೂನಿನಿಂದ ರಕ್ಷಿಸುವ ಉದ್ದೇಶದಿಂದಲೇ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿಯನ್ನು ಸರ್ಕಾರ ಹಿಂಪಡೆದಿದೆ ಎಂದು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪರ ವಕೀಲರು ಹೈಕೋರ್ಟ್‌ನಲ್ಲಿಂದು ವಾದಿಸಿದರು.
ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದು ಕಾಂಗ್ರೆಸ್ ಸರ್ಕಾರ 2023ರ ನ.28ರಂದು ಹೊರಡಿಸಿದ ಆದೇಶ ರದ್ದುಪಡಿಸುವಂತೆ ಕೋರಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಇಂದು ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ಉಮೇಶ್ ಎಂ.ಅಡಿಗ ಅವರಿದ್ದ ವಿಭಾಗೀಯ ಪೀಠದ ಮುಂದೆ ಎರಡೂ ಅರ್ಜಿಗಳ ಪರ ವಕೀಲರು ವಾದ ಮಂಡಿಸಿದರು.
ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್, ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಒಮ್ಮೆ ಸಿಬಿಐ ತನಿಖೆಗೆ ನೀಡಿದ ಅನುಮತಿ ಹಿಂಪಡೆಯಲು ಅವಕಾಶವಿಲ್ಲ. ಹಾಗಾಗಿ, ಸರ್ಕಾರದ ಕ್ರಮ ಕಾನೂನುಬಾಹಿರ. ಶಿವಕುಮಾರ್ ಅವರನ್ನು ರಕ್ಷಣೆ ಮಾಡುವ ಉದ್ದೇಶದಿಂದಲೇ ಸರ್ಕಾರ ಸುಪ್ರಿಂ ಕೋರ್ಟ್ ಮತ್ತು ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಶಾಸಕ ಯತ್ನಾಳ್ ಪರ ವಕೀಲರು ವಾದ ಮಂಡಿಸಿ, ಸರ್ಕಾರದ ಆದೇಶ ಪ್ರಶ್ನಿಸುವ ಅವಕಾಶ ಅರ್ಜಿದಾರರಿಗೆ ಇದೆ. 2023ರ ನ.28ರಂದು ಸಿಬಿಐಗೆ ನೀಡಿದ್ದ ಅನುಮತಿಯನ್ನು ಸರ್ಕಾರ ಹಿಂಪಡೆದಿತ್ತು. ಈ ಕ್ರಮ ಪ್ರಶ್ನಿಸಿ ಡಿ.5ರಂದು ಹೈಕೋರ್ಟ್‌ಗೆ ಯತ್ನಾಳ್ ಅರ್ಜಿ ಸಲ್ಲಿಸಿದ್ದಾರೆ. ಆ ನಂತರ ಡಿ.22ರಂದು ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ಸರ್ಕಾರ ವರ್ಗಾಯಿಸಿದೆ. ಸಿಬಿಐ ತನಿಖೆಗೆ ಒಮ್ಮೆ ವಹಿಸಿದ ಪ್ರಕರಣವನ್ನು ಬಳಿಕ ಹಿಂಪಡೆಯಲು ಸಾಧ್ಯವಿಲ್ಲ. ಆದ್ದರಿಂದ ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಕೋರಿದರು.
ಡಿ.ಕೆ.ಶಿವಕುಮಾರ್ ಪರ ಹಾಜರಿದ್ದ ಹಿರಿಯ ವಕೀಲ ಉದಯ ಹೊಳ್ಳ, ವಾದ ಮಂಡನೆಗೆ ಕಾಲಾವಕಾಶ ಕೋರಿದರು. ಅದಕ್ಕೆ ಸಮ್ಮತಿಸಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಮೇ 27ಕ್ಕೆ ಮುಂದೂಡಿತು. ಅಂದು ಬೆಳಗಿನ ಕಲಾಪದಲ್ಲಿಯೇ ಅರ್ಜಿ ವಿಚಾರಣೆ ನಡೆಸುವಂತೆ ಕೋರಿ ಅರ್ಜಿದಾರರ ಹಾಗೂ ಡಿಕೆಶಿ ಪರ ವಕೀಲರು ಜಂಟಿ ಮೆಮೋ ಸಲ್ಲಿಸಿದರು. ವಿಚಾರಣೆ ವೇಳೆ ರಾಜ್ಯ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ರಾಜ್ಯ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ವಿಚಾರಣೆ ವೇಳೆ ಹಾಜರಿದ್ದರು.
ಪ್ರಕರಣದ ಹಿನ್ನೆಲೆ:ಡಿ.ಕೆ.ಶಿವಕುಮಾರ್ ಅವರು ಗಣಿಗಾರಿಕೆ ಮತ್ತು ರಿಯಲ್ ಎಸ್ಟೇಟ್ ಉದ್ಯಮ ಸರಿದಂತೆ ಹಲವು ವ್ಯವಹಾರಗಳಲ್ಲಿ ತೊಡಗಿಕೊಂಡಿದ್ದು, ಅವರಿಗೆ ದೆಹಲಿ ಸೇರಿದಂತೆ ವಿವಿಧ ಸ್ಥಳಗಳ ಮೇಲೆ 2017ರ ಆಗಸ್ಟ್ 2ರಂದು ಆದಾಯ ತೆರಿಗೆಯ ಇಲಾಖೆ ಶೋಧ ನಡೆದಿತ್ತು. ಈ ವೇಳೆ 8.59 ಕೋಟಿ ರೂಪಾಯಿಗಳ ಹಣ ಪತ್ತೆಯಾಗಿತ್ತು. ಶಿವಕುಮಾರ್ ಅವರಿಗೆ ಸೇರಿದ ಸ್ಥಳದಲ್ಲಿ 41 ಲಕ್ಷ ರೂಪಾಯಿ ಪತ್ತೆಯಾಗಿತ್ತು. ಇದರ ಬೆನ್ನಿಗೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು.
ಇದರ ಬಳಿಕ ಜಾರಿ ನಿರ್ದೇಶನಾಲಯ ಕೂಡ ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದನ್ನು ಆಧರಿಸಿ 2019ರ ಸೆಪ್ಟೆಂಬರ್ 3ರಂದು ಶಿವಕುಮಾರ್ ಅವರನ್ನು ಬಂಧಿಸಲಾಗಿತ್ತು. ಆ ನಂತರ 2019ರ ಸೆಪ್ಟೆಂಬರ್ 9ರಂದು ಜಾರಿ ನಿರ್ದೇಶನಾಲಯ ಪತ್ರ ಆಧರಿಸಿ, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ತನಿಖೆ ನಡೆಸಲು ಸಿಬಿಐಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು.
ಇದನ್ನು ಪ್ರಶ್ನಿಸಿ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ವಜಾಗೊಳಿಸಿತ್ತು. ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣಾ ಹಂತದಲ್ಲಿರುವ ಸಂದರ್ಭದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸಿಬಿಐಗೆ ನೀಡಿದ್ದ ಅನುಮತಿ ರದ್ದುಪಡಿಸಿ ಆದೇಶಿಸಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬಿಜೆಪಿ ಮುಖಂಡ ಯತ್ನಾಳ್ ಹಾಗೂ ಸಿಬಿಐ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠ, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಿತ್ತು.