ನವದೆಹಲಿ/ಬೆಂಗಳೂರು:ಮುಡಾ ನಿವೇಶನ ಹಂಚಿಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಸಿಎಂ ಸಿದ್ದರಾಮಯ್ಯ ಮತ್ತು ಇತರ ಕೆಲವರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ (ಸೆಪ್ಟೆಂಬರ್ 30) ಪ್ರಕರಣ ದಾಖಲಿಸಿಕೊಂಡಿದೆ. ಈ ಮೂಲಕ ಭಾರೀ ಸದ್ದು ಮಾಡುತ್ತಿರುವ ಕೇಸ್ನಲ್ಲಿ ಕೇಂದ್ರ ತನಿಖಾ ಸಂಸ್ಥೆ ಪ್ರವೇಶ ಪಡೆದಂತಾಗಿದೆ.
ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಎಫ್ಐಆರ್ ಆಧಾರದಲ್ಲಿ ಇಡಿ ಇಸಿಐಆರ್(ECIR) ದಾಖಲಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಸಿಎಂ ಸಿದ್ದರಾಮಯ್ಯ ಕುಟುಂಬವು ಅಧಿಕಾರ ದುರ್ಬಳಕೆ ಮಾಡಿಕೊಂಡು ಮುಡಾದಿಂದ ಅಕ್ರಮವಾಗಿ ನಿವೇಶನಗಳನ್ನು ಪಡೆದಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್, ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು.
ಸೆಪ್ಟೆಂಬರ್ 27 ರಂದು ಎಫ್ಐಆರ್ ದಾಖಲಿಸಿದ್ದ ಲೋಕಾಯುಕ್ತ:ಇದರ ಬೆನ್ನಲ್ಲೇ, ಮೈಸೂರಿನ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್ 27 ರಂದು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಮತ್ತು ಜಮೀನು ಮಾಲೀಕ ದೇವರಾಜು ಅವರ ಮೇಲೆ ಎಫ್ಐಆರ್ ದಾಖಲಿಸಿದ್ದರು.
ಇದಕ್ಕೂ ಮೊದಲು, ಸಿಎಂ ವಿರುದ್ಧ ಪ್ರಕರಣದ ತನಿಖೆ ನಡೆಸಲು ರಾಜ್ಯಪಾಲರು ಆದೇಶ ನೀಡಿದ್ದರು. ಇದರ ವಿರುದ್ಧ ಸಿದ್ದರಾಮಯ್ಯ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಸಿಎಂ ವಿರುದ್ಧ ರಾಜ್ಯಪಾಲರು ಕೊಟ್ಟ ಆದೇಶವನ್ನು ಎತ್ತಿಹಿಡಿದಿತ್ತು.