ಬಳ್ಳಾರಿ:ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರ ಮನೆ ಮತ್ತು ಕಚೇರಿಯ ಮೇಲೆ ನಡೆಸಿದ ದಾಳಿಯ ವೇಳೆ ಮಹತ್ವದ ದಾಖಲೆಗಳು ಮತ್ತು ಲೆಕ್ಕಕ್ಕೆ ಸಿಗದ 31 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ಎರಡು ದಿನಗಳ ಹಿಂದೆ ಇಪ್ಪತ್ತು ಮಂದಿ ಅಧಿಕಾರಿಗಳು ಇಲ್ಲಿನ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ವೊಂದರ ಆಧಾರದ ಮೇಲೆ ತನಿಖೆ ನಡೆಸಿದ್ದರು. ಮಾಜಿ ಶಾಸಕ ಸೂರ್ಯ ನಾರಾಯಣ ರೆಡ್ಡಿ, ಭರತ್ ರೆಡ್ಡಿ ಮತ್ತು ಇತರರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) 2002ರ ಅಡಿಯಲ್ಲಿ ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲಿ ದಾಳಿ ನಡೆಸಲಾಗಿತ್ತು. ಶೋಧ ಸಂದರ್ಭದಲ್ಲಿ ಮಹತ್ವದ ದಾಖಲೆಗಳು, ವ್ಯವಹಾರಕ್ಕೆ ಸಂಬಂಧಿಸಿದ ಕಾಗದ ಪತ್ರಗಳು, ಸ್ಥಿರ ಮತ್ತು ಚರಾಸ್ತಿಗಳ ವಿವರ ಮತ್ತು ಲೆಕ್ಕಕ್ಕೆ ಸಿಗದ ಹಣ ವಶಕ್ಕೆ ಪಡೆಯಲಾಗಿದೆ ಎಂದು ಇಡಿ ಮಾಹಿತಿ ನೀಡಿದೆ.