ಮಂಡ್ಯ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸಾವಿರಾರು ನಿವೇಶನಗಳ ಹಂಚಿಕೆಯಲ್ಲಿ ಅಕ್ರಮಗಳಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ 14 ನಿವೇಶನಗಳ ಬದಲಿ ನಿವೇಶನಗಳ ಹಂಚಿಕೆ ವಿಚಾರದಲ್ಲಿಯೂ ಅಕ್ರಮವಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಲೋಕಾಯುಕ್ತಕ್ಕೆ ಬರೆದ ಪತ್ರದಲ್ಲಿ ಹೇಳಿರುವುದಾಗಿ ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ "ಲೋಕಾಯುಕ್ತಕ್ಕೆ ಇಡಿ ಪತ್ರ ಬರೆದಿರುವುದು ರಾಜಕೀಯ ಪ್ರೇರಿತವಾಗಿದೆ. ಹೈಕೋರ್ಟ್ನಲ್ಲಿ ನಾಳೆ ನಮ್ಮ ಅರ್ಜಿ ವಿಚಾರಣೆಗೆ ಇದೆ. ಅದರ ಹಿಂದಿನ ದಿನ ಇಡಿಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ" ಎಂದು ಆರೋಪಿಸಿದರು.
ಕೆ.ಆರ್.ಪೇಟೆ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. "ಇಡಿಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಇಡಿಗೆ ತನಿಖೆ ಮಾಡಲು ಅಧಿಕಾರ ಇಲ್ಲ. ರಾಜ್ಯಪಾಲರು ತನಿಖೆ ಮಾಡಿ ಅಂತಾ ಲೋಕಾಯುಕ್ತಕ್ಕೆ ಹೇಳಿರುವುದು, ಇಡಿಗಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು, ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಅಗತ್ಯವೇನಿತ್ತು? ಆದರೂ ಮಾಡಿದ್ದಾರೆ ಎಂದರೆ ಇದರ ಹಿಂದೆ ರಾಜಕೀಯ ದುರುದ್ದೇಶ ಇದೆ" ಎಂದು ಸಿಎಂ ಹೇಳಿದರು.
ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆಯ ಒಂದು ದಿನ ಮೊದಲು ಇಡಿ ತನಿಖೆಯ ವಿಚಾರಗಳನ್ನು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದು ಮತ್ತು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದು ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ. ಡಿಸೆಂಬರ್ 24ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಲೋಕಾಯುಕ್ತ ವರದಿ ಮೇಲೂ ಪ್ರಭಾವ ಬೀರುವ ಉದ್ದೇಶದಿಂದ ಇದನ್ನು ಮಾಡಲಾಗಿದೆ. ಇಡಿಯವರು ಲೋಕಾಯುಕ್ತಕ್ಕೆ ವರದಿ ನೀಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಪತ್ರ ಬರೆದಿರುವ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ" ಎಂದರು.