ಬೆಂಗಳೂರು: ಧಾರ್ಮಿಕ ಸ್ಥಳದಲ್ಲಿ ಚುನಾವಣಾ ಪ್ರಚಾರ ಮಾಡಿ ಮತದಾರರ ಮೇಲೆ ಪ್ರಭಾವ ಬೀರಿದ ಮತ್ತು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ತಮ್ಮ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅರ್ಜಿಯನ್ನು ತುರ್ತಾಗಿ ವಿಚಾರಣೆ ಪರಿಗಣಿಸಬೇಕು ಎಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠದ ಮುಂದೆ ರಾಘವೇಂದ್ರ ಪರ ವಕೀಲರು ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಮುಂದಿನ ವಾರದಲ್ಲಿ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಾಗುವುದು ಎಂದು ತಿಳಿಸಿದರು.
ಪ್ರಕರಣದ ಹಿನ್ನೆಲೆ:2024ರ ಮಾ.23ರಂದು ಬೆಳಗ್ಗೆ 11 ಗಂಟೆಯಲ್ಲಿ ಚಿತ್ರದುರ್ಗದ ಸಿದ್ದೇಶ್ವರ ಭೋವಿ ಸಮಾಜ ಗುರುಪೀಠದಲ್ಲಿ ಸಭೆ ನಡೆಸಿದ್ದರು. ಈ ವೇಳೆ ರಾಜಕೀಯ ಮತದಾರರ ಮೇಲೆ ಪ್ರಭಾವ ಬೀರಲು ಭಾಷಣ ಮಾಡಿ ಧಾರ್ಮಿಕ ಸ್ಥಳವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಸಭೆ ನಡೆಸಲು ಚುನಾವಣಾ ಆಯೋಗದಿಂದ ಪೂರ್ವಾನುಮತಿ ಸಹ ಪಡೆದಿಲ್ಲ. ಆ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಸಂಚಾರಿ ವಿಚಕ್ಷಣಾ ದಳದ ಅಧಿಕಾರಿ ಪಿ.ಅವಿನಾಶ್ ಚಿತ್ರದುರ್ಗ ಗ್ರಾಮೀಣ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಅದನ್ನು ಪರಿಗಣಿಸಿದ್ದ ಪೊಲೀಸರು, ಧಾರ್ಮಿಕ ಸಂಸ್ಥೆಗಳ (ದುರ್ಬಳಕೆ ತಡೆ) ಕಾಯ್ದೆ-1988 ಮತ್ತು ಜನಪ್ರತಿನಿಧಿಗಳ ಕಾಯ್ದೆ-1951 ಮತ್ತು ಭಾರತೀಯ ದಂಡ ಸಂಹಿತೆ ಸೆಕ್ಷನ್ 171ಎಫ್ (ಚುನಾವಣೆಯಲ್ಲಿ ಅನಪೇಕ್ಷಿತ ಪ್ರಭಾವ ಬೀರಿದ) ಅಡಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು.
ಇದನ್ನು ರದ್ದುಕೋರಿ ಸಲ್ಲಿಸಿದ್ದ ಅರ್ಜಿಯಲ್ಲಿ ರಾಘವೇಂದ್ರ ಅವರು, ತಾವು ಎಸಗಿದ್ದೇವೆ ಎನ್ನಲಾದ ಅಪರಾಧಗಳ ಬಗ್ಗೆ ಎಫ್ಐಆರ್ನಲ್ಲಿ ಮಾಹಿತಿ ಉಲ್ಲೇಖಿಸಿಲ್ಲ. ಹಾಗಾಗಿ, ಕ್ರಿಮಿನಲ್ ಪ್ರಕ್ರಿಯೆ ಮುಂದುವರಿಸಿದರೆ, ಅದು ಕಾನೂನಿನ ದುರ್ಬಳಕೆಯಾಗಲಿದೆ. ಹಾಗಾಗಿ, ತಮ್ಮ ವಿರುದ್ಧ ಎಫ್‌ಐಆರ್ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಇದನ್ನೂ ಓದಿ:ಮಠಾಧೀಶರ ಬಗ್ಗೆ ಹಗುರ ಹೇಳಿಕೆ ಆರೋಪ: ದೇವಾಲಯಕ್ಕೆ ಈಶ್ವರಪ್ಪ ಬಂದು ಘಂಟೆ ಹೊಡೆಯಲಿ - ಬಿ ವೈ ರಾಘವೇಂದ್ರ ಸವಾಲು - BJP candidate b y raghavendra