ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಯ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಖಜಾಂಚಿ ಸ್ಥಾನದ ಚುನಾವಣೆಯು ಡಿಸೆಂಬರ್ 27 ರಂದು ಶುಕ್ರವಾರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಗರದ ಕಬ್ಬನ್ ಪಾರ್ಕ್ನಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ನಡೆಯಲಿದೆ.
ನಗರದ ವಸತಿ ಗೃಹದಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರು, ರಾಜ್ಯದಲ್ಲಿ 5.25 ಲಕ್ಷ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ರಾಜ್ಯದ ಏಕೈಕ ಬೃಹತ್ ಸಂಘಟನೆಯಾಗಿದ್ದು, ಬೇರೆ ರಾಜ್ಯಗಳ ನೌಕರರ ಸಂಘಟನೆಗಳಿಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯಾದ್ಯಂತ 30 ಜಿಲ್ಲಾ ಶಾಖೆಗಳು, 3 ಶೈಕ್ಷಣಿಕ ಜಿಲ್ಲೆಗಳು, 186 ತಾಲೂಕು ಶಾಖೆಗಳು ಮತ್ತು 7 ಯೋಜನಾ ಶಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಶಾಖೆಗಳಲ್ಲಿ 66 ಜಿಲ್ಲಾ ನಿರ್ದೇಶಕರು, ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ, ರಾಜ್ಯ ಪರಿಷತ್ ಸದಸ್ಯರನ್ನು ಚುನಾವಣೆ ಮುಖಾಂತರ ಆಯ್ಕೆ ಮಾಡಲಾಗುತ್ತದೆ. ಅದೇ ರೀತಿ ತಾಲೂಕು ಶಾಖೆಗಳಲ್ಲಿ 34 ನಿರ್ದೇಶಕರು, ತಾಲೂಕು ಅಧ್ಯಕ್ಷರು, ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಗುತ್ತದೆ. ರಾಜ್ಯದಲ್ಲಿ 7 ಯೋಜನಾ ಶಾಖೆಗಳಿದ್ದು, 19 ನಿರ್ದೇಶಕರು, ಅಧ್ಯಕ್ಷರು, ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರನ್ನು ಚುನಾವಣೆಯಲ್ಲಿ ಆಯ್ಕೆ ಮಾಡಲಾಗುತ್ತದೆ. ಜಿಲ್ಲೆ, ತಾಲೂಕು ಮತ್ತು ಯೋಜನಾ ಶಾಖೆಗಳ ಅಧ್ಯಕ್ಷರು, ಕಾರ್ಯದರ್ಶಿಯನ್ನು ನಾಮನಿರ್ದೇಶನದ ಮೂಲಕ ನೇಮಕ ಮಾಡಲಾಗುತ್ತದೆ. ಬೆಂಗಳೂರು ನಗರ ಜಿಲ್ಲೆಯ ವಿವಿಧ ಇಲಾಖೆಗಳಿಂದ 102 ರಾಜ್ಯ ಪರಿಷತ್ ಸದಸ್ಯರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು.
ಸಂಘದ ರಾಜ್ಯಾಧ್ಯಕ್ಷ ಮತ್ತು ರಾಜ್ಯ ಖಜಾಂಚಿ ಸ್ಥಾನದ ಚುನಾವಣೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ 102 ರಾಜ್ಯ ಪರಿಷತ್ ಸದಸ್ಯರು ಮತ್ತು ಜಿಲ್ಲಾ ಶಾಖೆಗಳ ಜಿಲ್ಲಾಧ್ಯಕ್ಷರು ಈ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿದೆ. ಜೊತೆಗೆ ಬೆಂಗಳೂರು ನಗರ ಜಿಲ್ಲೆಯ 102 ರಾಜ್ಯ ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ, ಜಿಲ್ಲಾ ರಾಜ್ಯ ಪರಿಷತ್ ಸದಸ್ಯರು, ಜಿಲ್ಲಾ ಕಾರ್ಯದರ್ಶಿ ಮತ್ತು ತಾಲೂಕು ಶಾಖೆಯ ಅಧ್ಯಕ್ಷರು, ಖಜಾಂಚಿ, ರಾಜ್ಯ ಪರಿಷತ್ ಸದಸ್ಯರು, ಕಾರ್ಯದರ್ಶಿ ಮತ್ತು ಯೋಜನಾ ಶಾಖೆಗಳ ಅಧ್ಯಕ್ಷರು ಸೇರಿದಂತೆ ಒಟ್ಟು 971 ಮತದಾರರಿದ್ದು, ಈ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ ಎಂದು ತಿಳಿಸಿದರು.