ಬೆಂಗಳೂರು:ಅತಿ ಶೀಘ್ರವೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ. ಚುನಾವಣೆಯ ಮೂಲಕ ಕರ್ನಾಟಕದ ಬಿಜೆಪಿ ಘಟಕದ ಅಧ್ಯಕ್ಷರ ಆಯ್ಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವ, ಕರ್ನಾಟಕ ಬಿಜೆಪಿ ಚುನಾವಣಾಧಿಕಾರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೂತ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸ್ಥಾನದವರೆಗೂ ಚುನಾವಣೆ ನಡೆಯಲಿದೆ. ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರೂ ಸೇರಿ ಚರ್ಚೆ ನಡೆಸಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ ಎಂದರು.
ಮತ್ತೊಂದೆಡೆ, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮುಂದುವರೆಯಲು ಬಿ.ವೈ ವಿಜಯೇಂದ್ರ ಎಲ್ಲ ಪ್ರಯತ್ನ ನಡೆಸಿದ್ದು, ವಿಜಯೇಂದ್ರ ಅವರನ್ನು ಬದಲಿಸಿ ಹೊಸಬರನ್ನು ಅಧ್ಯಕ್ಷ ಸ್ಥಾನಕ್ಕೆ ತರಲು ಬಿಜೆಪಿಯಲ್ಲಿನ ವಿಜಯೇಂದ್ರ ವಿರೋಧಿ ಬಣ ಹೈಕಮಾಂಡ್ ಮಟ್ಟದಲ್ಲಿ ಪ್ರಯತ್ನ ನಡೆಸಿರುವಾಗಲೇ ಕೇಂದ್ರ ಕೃಷಿ ಸಚಿವ ಶಿವರಾಜ್‌ಸಿಂಗ್ ಅವರ ಹೇಳಿಕೆ ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.