ಕರ್ನಾಟಕ

karnataka

ETV Bharat / state

ನಿರುದ್ಯೋಗಿ ಯುವಕರಿಗೆ ಯುವನಿಧಿ ಜೊತೆ ಉದ್ಯೋಗ ಸೃಷ್ಟಿ ಮತ್ತು ತರಬೇತಿ: ಸಿಎಂ ಸಿದ್ದರಾಮಯ್ಯ - CM Siddaramaiah

ಯುವ ಸಮೃದ್ಧಿ ಸಮ್ಮೇಳನ ಹಾಗೂ ಉದ್ಯೋಗ ಮೇಳವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ನಿರುದ್ಯೋಗಿ ಯುವಕರಿಗೆ ಉದ್ಯೋಗ ಸೃಷ್ಟಿಯ ಭರವಸೆ ನೀಡಿದರು.

CM Siddaramaiah
ಸಿಎಂ ಸಿದ್ದರಾಮಯ್ಯ

By ETV Bharat Karnataka Team

Published : Feb 26, 2024, 1:48 PM IST

ಬೆಂಗಳೂರು: ನಿರುದ್ಯೋಗಿ ಯುವಕರಿಗೆ 'ಯುವನಿಧಿ' ಯೋಜನೆಯ ಜೊತೆಗೆ, ಉದ್ಯೋಗ ಸೃಷ್ಟಿ ಮತ್ತು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೃಹತ್ 'ಯುವ ಸಮೃದ್ಧಿ ಸಮ್ಮೇಳನ ಮತ್ತು ಉದ್ಯೋಗ ಮೇಳ' ಉದ್ಘಾಟಿಸಿ ಅವರು ಮಾತನಾಡಿದರು.

"ದೇಶದ ಪ್ರಮುಖ ಸಮಸ್ಯೆಯಾಗಿರುವ ನಿರುದ್ಯೋಗದ ಸಮಸ್ಯೆ ಕಳೆದ 10 ವರ್ಷಗಳಲ್ಲಿ ಬೃಹತ್ ಗಾತ್ರದಲ್ಲಿ ಬೆಳೆದಿದೆ. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದ್ದರು. ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿ, ಇರುವ ಉದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗದ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ ಶೇ 8.40ಕ್ಕೆ ಏರಿಕೆಯಾಗಿದೆ" ಎಂದು ವಿವರಿಸಿದರು.

"ಆದರೆ ನಾವು ಯುವನಿಧಿಯನ್ನೂ ಕೊಡುತ್ತೇವೆ ಉದ್ಯೋಗವನ್ನೂ ಸೃಷ್ಟಿಸುತ್ತೇವೆ. ಉದ್ಯೋಗಕ್ಕೆ ಬೇಕಾದ ಕೌಶಲ್ಯ ತರಬೇತಿಯನ್ನೂ ನೀಡುತ್ತೇವೆ. ಇದು ನಮ್ಮ ಸರ್ಕಾರ ವಿದ್ಯಾರ್ಥಿ ಯುವಜನರಿಗೆ ನೀಡುವ ಅಭಯ" ಎಂದು ಭರವಸೆ ನೀಡಿದರು. ಹೊಸ ಉದ್ಯೋಗಗಳ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ GTDC ಗಳ ಜತೆಗೆ ಹೊಸದಾಗಿ ಇನ್ನಷ್ಟು GTDC ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಈ ವೇಳೆ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು, ನೂರಾರು ಉದ್ಯಮಿಗಳು, ಸುಮಾರು 80 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ಯುವಜನರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ನೀಡಲು ಯುವನಿಧಿ ಕೊಟ್ಟಿದ್ದೇವೆ: ಡಿಸಿಎಂ ಡಿ ಕೆ ಶಿವಕುಮಾರ್​

ರಾಜ್ಯ ಸರ್ಕಾರ ಜನವರಿ 12ರಂದು ತಾನು ನೀಡಿದ್ದ ಭರವಸೆಯಂತೆ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಶಿವಮೊಗ್ಗದ ಫ್ರೀಡಂ ಪಾರ್ಕ್​ನಲ್ಲಿ ನಡೆದ ಬೃಹತ್​ ಸಮಾವೇಶದಲ್ಲಿ ಚಾಲನೆ ನೀಡಿತ್ತು. ಯೋಜನೆಯ ಕೆಲ ಫಲಾನುಭವಿಗಳಿಗೆ ಚೆಕ್ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ​ ಇತರ ಸಚಿವರುಗಳು ಚಾಲನೆ ಕೊಟ್ಟಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಿದ್ದರು. ರಾಜ್ಯ ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಯುವನಿಧಿಯು ಕೊನೆಯ ಯೋಜನೆಯಾಗಿತ್ತು. ಈ ಯೋಜನೆಗೆ ಸುಮಾರು 70 ಸಾವಿರ ಯುವಕರು ನೋಂದಣಿ ಮಾಡಿಕೊಂಡಿದ್ದರು.

ABOUT THE AUTHOR

...view details