ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು 15ನೇ ಬಾರಿ, 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕಾಗಿ ಒತ್ತು ನೀಡಿ, ಕೆಲ ಕ್ಷೇತ್ರಗಳಿಗೆ ಅನುದಾನ ಒದಗಿಸಲಾಗಿದೆ. ಇದಕ್ಕೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ - ರುಚಿಯಾಗಿ ಕೈಗೆಟುಕುವ ದರದಲ್ಲಿ ಒದಗಿಸುವ ಸದುದ್ದೇಶದಿಂದ ಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್‍ಗಳನ್ನು ಸ್ಥಾಪಿಸುವುದಾಗಿ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆವರಿಗೆ ವೈದ್ಯಕೀಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.
ಬಜೆಟ್ ಕುರಿತಂತೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವರು, 2024-25ನೇ ಸಾಲಿನ ಬಜೆಟ್ನಲ್ಲಿ ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಸಂಜೀವಿನಿ ಕ್ಯಾಂಟೀನ್ ಸ್ಥಾಪನೆಗಾಗಿ 7.50 ಕೋಟಿ ರೂ. ವೆಚ್ಚ ಮಾಡಲಾಗುವುದು ಮತ್ತು 50 ಕೆಫೆಗಳ ಸ್ಥಾಪನೆ ಕುರಿತು ಆಶ್ವಾಸನೆ ನೀಡಿದ್ದಾರೆ. ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವಸಹಾಯ ಗುಂಪುಗಳ ಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡುವುದಾಗಿ ತಿಳಿಸಿದ್ದಾರೆ. 2,500 ಕಾಫಿ ಕಿಯೋಕ್ಸ್ ಅನ್ನು 25 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಿ, ಇದರ ಸಂಪೂರ್ಣ ನಿರ್ವಹಣೆಯನ್ನು ಮಹಿಳೆಯರೇ ನೋಡಲಿದ್ದಾರೆ ಎಂದು ಸಚಿವರು ವಿವರಿಸಿದ್ದಾರೆ.
ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟುಕುವ ದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು 5 ನಗರಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಘೋಷಣೆ ಮಾಡಲಾಗಿದೆ. ಈ ವಸತಿ ವ್ಯವಸ್ಥೆಯನ್ನು ಮಹಿಳಾ ಸ್ವಸಹಾಯ ಗುಂಪುಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ವಹಣೆ ಮಾಡಲು ನಿರ್ಧರಿಸಲಾಗಿದೆ. ಕೌಶಲ್ಯ ಅಭಿವೃದ್ಧಿ ಇಲಾಖೆ ವತಿಯಿಂದ ನೀಡುತ್ತಿರುವ ಕೋರ್ಸ್‍ಗಳಲ್ಲಿ ವಿಷಯಾಧಾರಿತ ಉದ್ಯಮಶೀಲತೆ ಅಭಿವೃದ್ಧಿ ತರಬೇತಿಯನ್ನು 25 ಸಾವಿರ ಯುವನಿಧಿ ಫಲಾನುಭವಿಗಳಿಗೆ ನೀಡಲು ನಿರ್ಧರಿಸಲಾಗಿದೆ. ಯುವ ಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆ ಉದ್ಯೋಗ ಆಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರಲು ಯುವ ಸಮೃದ್ಧಿ ಉದ್ಯೋಗ ಮೇಳವನ್ನು ರಾಜ್ಯದ ವಿವಿಧ ಭಾಗದಲ್ಲಿ ಆಯೋಜಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಬಜೆಟ್ನಲ್ಲಿ ಘೋಷಿಸಿದ್ದಾರೆ.