ಬೆಂಗಳೂರು: ಅಸಮಾಧಾನಿತ ಶಾಸಕ ಎಸ್.ಟಿ.ಸೋಮಶೇಖರ್ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಅವರ ಬೇಡಿಕೆಯಂತೆ ಉಚ್ಚಾಟನೆ ಮಾಡಲಾಗಿದ್ದ ಯಶವಂತಪುರ ವಿಧಾನಸಭಾ ಕ್ಷೇತ್ರದ ಹಿರಿಯ ನಾಯಕ, ಮಾಜಿ ಮಂಡಲ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಖಜಾಂಚಿ ಸಿ.ಎಂ.ಮಾರೇಗೌಡ ಅವರನ್ನು ಇದೀಗ ಪುನಃ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಸೋಮಶೇಖರ್ ಬಹುತೇಕ ಪಕ್ಷದಿಂದ ದೂರ ಸರಿದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಪಕ್ಷ ಬಂದಿದೆ.
ಕಾರಣಾಂತರಗಳಿಂದ ಈ ಹಿಂದೆ ಪಕ್ಷದಿಂದ ಅಮಾನತುಗೊಂಡಿದ್ದ ಮಾರೇಗೌಡರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ತಿಳಿಸಿದೆ. ಪಕ್ಷದ ಅಧ್ಯಕ್ಷರು ಅಮಾನತು ವಾಪಸ್ ಪಡೆದುಕೊಂಡ ನಂತರ ಇಂದು ಬಿಜೆಪಿ ಕಚೇರಿಗೆ ಆಗಮಿಸಿದ ಮಾರೇಗೌಡರನ್ನು ಆತ್ಮೀಯವಾಗಿ ಸ್ವಾಗತಿಸಿ ಪಕ್ಷದ ಸಂಘಟನೆ ಕುರಿತು ಚರ್ಚಿಸಲಾಯಿತು ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
ಹಿನ್ನೆಲೆ:ಯಶವಂತಪುರ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಮಾರೇಗೌಡ, ಯಶವಂತಪುರ ನಗರ ಮಂಡಲದ ಉಪಾಧ್ಯಕ್ಷ ಧನಂಜಯ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಆದೇಶ ಹೊರಡಿಸಲಾಗಿತ್ತು. ಪಕ್ಷವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಮಾರೇಗೌಡ, ಧನಂಜಯ ಅವರನ್ನು 6 ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಬಿ.ನಾರಾಯಣ ಆದೇಶ ಹೊರಡಿಸಿದ್ದರು.