ಬೆಂಗಳೂರು: ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರ ಮಕ್ಕಳ ಕಲ್ಯಾಣಕ್ಕಾಗಿ 6,700 ಕೋಟಿ ಹೇಗೆ ಬಳಕೆಯಾಗಿದೆ ಎಂಬುದರ ಸಂಬಂಧ ವಿವರ ಸಲ್ಲಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಇದೇ ವೇಳೆ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮೀಸಲಾದ ವರ್ಗದಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಿದ್ದ ಇಬ್ಬರು ಸ್ನಾತಕೋತ್ತರ ವಿದ್ಯಾರ್ಥಿನಿಯರಿಗೆ ತಕ್ಷಣವೇ ನೆರವು ನೀಡಲು ಜಾರಿ ಮಾಡಿದ್ದ ಮಧ್ಯಂತರ ಆದೇಶ ಪಾಲನೆ ಮಾಡದ ಕಲ್ಯಾಣ ಮಂಡಳಿ ನಿಲುವನ್ನು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿಸಿಲು, ಮಳೆ ಎನ್ನದೇ ಶ್ರಮಪಡುವ ಕಟ್ಟಡ ಕಾರ್ಮಿಕರ ದುಡಿಮೆಯಿಂದಾಗಿ ಸಾವಿರಾರು ಕೋಟಿ ರೂಪಾಯಿ ಸೆಸ್ ಸಂಗ್ರಹವಾಗುತ್ತಿದ್ದರೂ, ಅದನ್ನು ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಖರ್ಚು ಮಾಡದೇ, ಅಧಿಕಾರಿಗಳು ಐಷಾರಾಮಿ ಜೀವನ ಸಾಗಿಸುತ್ತಿರುವುದು ಬೇಸರದ ಸಂಗತಿಯಾಗಿದೆ. ಈ ಕುರಿತಂತೆ ಮುಂದಿನ ವಿಚಾರಣೆ ವೇಳೆ ವಿವರಣೆ ನೀಡಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತು.