ಹಾವೇರಿ:ಪಂಪ್ ಸೆಟ್ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ತಂದೆ - ಮಗ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಕರಬಸಪ್ಪ ಕಡೇನಾಯಕನಹಳ್ಳಿ (50) ಹಾಗೂ ಅವರ ಪುತ್ರ ದರ್ಶನ (26) ಎಂದು ಗುರುತಿಸಲಾಗಿದೆ.
ಕರಬಸಪ್ಪ ಮತ್ತು ದರ್ಶನ ಇಬ್ಬರೂ ಸೇರಿಕೊಂಡು ಪಂಪ್ ಸೆಟ್ ದುರಸ್ತಿ ಮಾಡಲು ಮುಂದಾಗಿದ್ದರು. ಭತ್ತದ ಬೆಳೆಗೆ ನೀರು ಹಾಯಿಸಲು ಮೋಟಾರ್ ಆನ್ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ವಿದ್ಯುತ್ ಸ್ಪರ್ಶಕ್ಕೆ ಪಂಪ್ ಸೆಟ್ ಮೇಲೆಯೇ ಬಿದ್ದು ಇಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಮಳೆಗಾಲದಲ್ಲಿ ಈ ರೀತಿಯ ವಿದ್ಯುತ್ ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮವಹಿಸಿ ಎಂದು ಹೆಸ್ಕಾಂ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಪ್ರತ್ಯೇಕ ಘಟನೆ, ವಿದ್ಯುತ್ ತಂತಿ ತಗುಲಿ ರೈತ ಸಾವು:ಮೈಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುವ ವೇಳೆ ರೈತ ನಾಗಪ್ಪ ಬನ್ನಿಹಟ್ಟಿ (45) ಮೃತರಾಗಿದ್ದಾರೆ. ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ಘಟನೆ ನಡೆದಿದೆ. ಇದಕ್ಕೆ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ರೈತರು ಆರೋಪಿಸಿದ್ದಾರೆ.
ಹೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯ ಖಂಡಿಸಿ ರೈತರು ಬ್ಯಾಡಗಿ ಹೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಮೃತ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದರು. ಮುಂದೆ ಈ ರೀತಿಯಾಗದಂತೆ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥ ಸಿಬ್ಬಂದಿ ಮೇಲೆ ಕ್ರಮ ಜರುಗಿಸಬೇಕು ಎಂದು ರೈತರು ಒತ್ತಾಯಿಸಿದರು. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಬೆಳಗಾವಿಯಲ್ಲಿ ಭಾರಿ ಅಗ್ನಿ ದುರಂತ: ಹೊತ್ತಿ ಉರಿದ ಟಿಕ್ಸೊ ಟೇಪ್ ಕಂಪನಿ; ಓರ್ವ ಕಾರ್ಮಿಕ ಕಾಣೆ, ಮೂವರಿಗೆ ಗಂಭೀರ ಗಾಯ - factory caught fire