ಕರ್ನಾಟಕ

karnataka

ETV Bharat / state

ಫೆಂಗಲ್ ಅಬ್ಬರ: ಕೊಡಗಿಗೆ ರೆಡ್, ಹಲವೆಡೆ ಆರೆಂಜ್ ಅಲರ್ಟ್; ಈ ಜಿಲ್ಲೆಗಳಲ್ಲಿ ಇಂದೂ ಶಾಲೆಗಳಿಗೆ ರಜೆ

ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ತೀವ್ರ ಚಳಿ, ಗಾಳಿ ಹಾಗೂ ಹಲವೆಡೆ ಭಾರೀ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ETV Bharat
ಫೆಂಗಲ್ ಚಂಡಮಾರುತ (ETV Bharat)

By ETV Bharat Karnataka Team

Published : Dec 2, 2024, 6:51 PM IST

ಬೆಂಗಳೂರು:ತಮಿಳುನಾಡು ಕರಾವಳಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿಯೂ ತೀವ್ರ ಚಳಿ, ಗಾಳಿ ಹಾಗೂ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಹಲವು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಿದೆ. ಮುಖ್ಯವಾಗಿ, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ.

ಮುಂದಿನ 24 ಗಂಟೆಗಳ ಕಾಲ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​​, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಹಾಸನ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇದೆ.

ಕೊಡಗು ಜಿಲ್ಲೆಯಾದ್ಯಂತ ಸೋಮವಾರ ಸಂಜೆಯಿಂದ ಇಂದು ಮಧ್ಯಾಹ್ನದವರೆಗೆ ಅತಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಹಾಸನ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಹ ಹೆಚ್ಚು ಮಳೆಯಾಗಲಿದೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಫೆಂಗಲ್ ಚಂಡಮಾರುತ (Meteorological Department)

ಧಾರವಾಡ, ಗದಗ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದಿದೆ.

ಮೀನುಗಾರರಿಗೆ ಎಚ್ಚರಿಕೆ:ದಕ್ಷಿಣ ಕರ್ನಾಟಕದ ಕರಾವಳಿ ಉದ್ದಕ್ಕೂ ಗಾಳಿಯ ವೇಗ ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಬೀಸಲಿದ್ದು, ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಸೂಚಿಸಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಸಾಧಾರಣ/ಭಾರೀ ಮಳೆ:ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಸಾಧಾರಣ ಮಳೆ ಆಗಲಿದ್ದು, ಕೆಲವೊಮ್ಮೆ ಭಾರೀ ಸ್ವರೂಪ ಪಡೆಯಲಿದೆ. ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 23 ಮತ್ತು 20 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ.

ಫೆಂಗಲ್ ಚಂಡಮಾರುತ (Meteorological Department)

''ಉತ್ತರ ಒಳನಾಡಿನ ತಮಿಳುನಾಡಿನ ಮೇಲೆ ಫೆಂಗಲ್ ಚಂಡಮಾರುತದ ಪರಿಣಾಮ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ. ಈ ಕಾರಣಕ್ಕೆ ರಾಜ್ಯದಲ್ಲಿಯೂ ಸಹ ಚಳಿ, ಮಳೆ ಹೆಚ್ಚಾಗಿದೆ. ನಿನ್ನೆಯಿಂದ ಅತಿ ಹೆಚ್ಚು ಮಳೆ 5 ಸೆಮೀ ಚಾಮರಾಜನಗರದಲ್ಲಿ ದಾಖಲಾಗಲಿದೆ. ಚಾಮರಾಜನಗರ ಜಿಲ್ಲೆಯ ಬಂಡೀಪುರದಲ್ಲಿ ಮತ್ತು ಕೋಲಾರ ಜಿಲ್ಲೆಯ ರಾಯಲ್ಪಾಡಿನಲ್ಲಿ 4 ಸೆಂ.ಮೀ ಮಳೆಯಾಗಿದೆ'' ಎಂದು ಬೆಂಗಳೂರು ಹವಾಮಾನ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಕೆಲ ಜಿಲ್ಲೆಗಳಲ್ಲಿ ಇಂದೂ ಶಾಲೆಗಳಿಗೆ ರಜೆ:ಚಂಡಮಾರುತ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ (12ನೇ ತರಗತಿವರೆಗೆ) ಇಂದು (ಡಿ.3) ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಫೆಂಗಲ್ ಚಂಡಮಾರುತ (Meteorological Department)

ರೆಡ್​ ಅಲರ್ಟ್​​ ಹಿನ್ನೆಲೆಯಲ್ಲಿ ಕೊಡಗುಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ, ಕಾಲೇಜು (ಪದವಿ, ಸ್ನಾತಕೋತ್ತರ ಹೊರತು) ಗಳಿಗೆ ಡಿ.3ರ ಮಂಗಳವಾರ ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ಘೋಷಿಸಿದ್ದಾರೆ.

ಹಾಗೆಯೇ, ಚಾಮರಾಜನಗರಜಿಲ್ಲೆಯಲ್ಲಿಯೂ ಕೂಡ ಸತತವಾಗಿ ಮಳೆಯಾಗುತ್ತಿದ್ದು, ಎಲ್ಲ ಶಾಲಾ ಕಾಲೇಜುಗಳಿಗೆ ಡಿಸೆಂಬರ್ 3ರ ಮಂಗಳವಾರವೂ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ. ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜುಗಳಿಗೆ ಹೊರತುಪಡಿಸಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಮೈಸೂರುಜಿಲ್ಲೆಯಲ್ಲಿಯೂ ಮಳೆ ಹಿನ್ನೆಲೆಯಲ್ಲಿ ಇಂದು (ಡಿ.3) ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (ದ್ವಿತೀಯ ಪಿಯುಸಿವರೆಗೆ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಆದೇಶಿಸಿದ್ದಾರೆ.

ಜೊತೆಗೆ, ಉಡುಪಿ, ಚಿಕ್ಕಮಗಳೂರು, ಮಂಡ್ಯ, ರಾಮನಗರಹಾಗೂ ಕೋಲಾರಜಿಲ್ಲೆಗಳಲ್ಲೂ ಕೂಡ ಇಂದು ಅಂದರೆ ಮಂಗಳವಾರ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ (12ನೇ ತರಗತಿವರೆಗೆ) ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದಲ್ಲಿ ಅಲರ್ಟ್:ಹವಾಮಾನ ಇಲಾಖೆಯ ವರದಿಯಂತೆ ಇಂದು ಜಿಲ್ಲಾದ್ಯಂತ ಆರೆಂಜ್ ಅಲರ್ಟ್ ಹಾಗೂ ನಾಳೆ ಯಲ್ಲೋ ಅಲರ್ಟ್ ಇರುವುದರಿಂದ ಮುಂಜಾಗ್ರತ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವುದರಿಂದ ಜಿಲ್ಲಾ ವಿಪತ್ತು ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ರಜೆ ಘೋಷಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ:ಫೆಂಗಲ್ ಚಂಡಮಾರುತ: ದ.ಕನ್ನಡಕ್ಕೆ ಆರೆಂಜ್ ಅಲರ್ಟ್, ನಾಳೆ ಶಾಲಾ-ಕಾಲೇಜಿಗೆ ರಜೆ; ಮೀನುಗಾರಿಕೆಗೆ ತೆರಳದಂತೆ ಸೂಚನೆ

ABOUT THE AUTHOR

...view details