ಬೆಂಗಳೂರು :ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಲೋಕಾಯುಕ್ತ ಎಸ್ಐಟಿ ವಿಭಾಗದ ಮುಖ್ಯಸ್ಥ, ಎಡಿಜಿಪಿ ಚಂದ್ರಶೇಖರ್ ಅವರು ನೀಡಿರುವ ದೂರಿನನ್ವಯ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.
ದುರುದ್ದೇಷಪೂರಿತ ಹೇಳಿಕೆಗಳನ್ನು ನೀಡಿರುವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು, ''ನಾನು ಬೌರಿಂಗ್ ಆಸ್ಪತ್ರೆಯಿಂದ ಸುಳ್ಳು ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ ಕರ್ನಾಟಕ ಕೇಡರ್ನಲ್ಲಿ ಮುಂದುವರೆಯುತ್ತಿರುವುದಾಗಿ ಹಾಗೂ ಲಂಚ ಪಡೆಯುತ್ತಿರುವುದಾಗಿ ಆರೋಪಿಸಿದ್ದಾರೆ. ಅಲ್ಲದೆ ಕುಮಾರಸ್ವಾಮಿಯವರು ನನ್ನನ್ನು ಕರ್ನಾಟಕ ಕೇಡರ್ನಿಂದ ಅನ್ಯರಾಜ್ಯಕ್ಕೆ ವರ್ಗಾವಣೆ ಮಾಡಿಸುವುದಾಗಿ ಮೌಖಿಕವಾಗಿ ಬೆದರಿಕೆ ಹಾಕಿದ್ದಾರೆ. ಹಾಗೂ ಅವರ ಆಪ್ತರಾದ ಸುರೇಶ್ ಬಾಬುರವರು ನನ್ನ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸುಳ್ಳು ದೂರು ನೀಡಿದ್ದಾರೆ'' ಎಂದು ತಮ್ಮ ದೂರಿನಲ್ಲಿ ಎಡಿಜಿಪಿ ಚಂದ್ರಶೇಖರ್ ಉಲ್ಲೇಖಿಸಿದ್ದಾರೆ.
ದೂರಿನ ಹಿನ್ನೆಲೆಯಲ್ಲಿ ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೆತ್ತಿಕೊಳ್ಳಲಾಗಿದೆ.
ಆಯುಕ್ತ ದಯಾನಂದ್ ಮಾಹಿತಿ:ಸಂಜಯನಗರ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಸಂಬಂಧ ಮೊದಲು ಎನ್‌ಸಿಆರ್ ದಾಖಲಿಸಿಕೊಳ್ಳಲಾಗಿತ್ತು. ನ್ಯಾಯಾಲಯದ ಅನುಮತಿ ಪಡೆದು ಈಗ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು.
ಪ್ರಕರಣ ಹಿನ್ನೆಲೆ;ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣದಲ್ಲಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಎಡಿಜಿಪಿ ಚಂದ್ರಶೇಖರ್ ಅವರು ಪತ್ರ ಬರೆದಿದ್ದರು. ಆ ಬಳಿಕ ಕುಮಾರಸ್ವಾಮಿ ಮಾಧ್ಯಮಗೋಷ್ಟಿ ನಡೆಸಿ, ಚಂದ್ರಶೇಖರ್ ವಿರುದ್ಧ ಆರೋಪ ಮಾಡಿದ್ದರು.