ಬೆಂಗಳೂರು: ಮುಸ್ಲಿಂ ಧರ್ಮೀಯರ ಮತದಾನದ ಹಕ್ಕಿನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಮರಾಜಪೇಟೆಯ ವಾಲ್ಮೀಕಿನಗರದ ನಿವಾಸಿ ಸೈಯದ್ ಅಬ್ಬಾಸ್ ಎಂಬವರು ನೀಡಿರುವ ದೂರಿನನ್ವಯ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೂರಿನ ಸಾರಾಂಶ:''ಫೇಸ್‌ಬುಕ್‌ನಲ್ಲಿ ನೋಡುತ್ತಿರುವಾಗ ಮುಸ್ಲಿಂರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು - ಚಂದ್ರಶೇಖರ ಸ್ವಾಮೀಜಿ ಎಂಬ ಶೀರ್ಷಿಕೆಯಿದ್ದ ಲಿಂಕ್ ಗಮನಿಸಿದೆ. ಲಿಂಕ್ ತೆರೆದು ನೋಡಿದಾಗ, ಭಾರತೀಯ ಕಿಸಾನ್ ಸಂಘದ ವತಿಯಿಂದ ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರ ಸ್ವಾಮೀಜಿ ಅವರು ಆ ರೀತಿ ಮಾತನಾಡಿರುವುದು ಕಂಡು ಬಂದಿದೆ'' ಎಂದು ದೂರಲಾಗಿದೆ.
''ಚಂದ್ರಶೇಖರ ಸ್ವಾಮೀಜಿಯವರು ಮುಸ್ಲಿಂರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು, ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು, ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದಿರಲು ಸಾಧ್ಯ. ರೈತರ ಜಮೀನು ಉಳಿಸಲು ಎಲ್ಲರೂ ಒಗ್ಗಟ್ಟಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಸರ್ಕಾರ ಹೋದರೂ ತೊಂದರೆ ಇಲ್ಲ. ವಕ್ಫ್ ಮಂಡಳಿ ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಬೇಕು' ಎಂದು ಚಂದ್ರಶೇಖರ ಸ್ವಾಮೀಜಿಯವರು ದ್ವೇಷದ ಭಾಷಣ ಮಾಡಿದ್ದಾರೆ'' ಎಂದು ಸೈಯದ್ ಅಬ್ಬಾಸ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಭಾರತೀಯ ಪ್ರಜೆಗಳಾದ ನಾವು ಸಂವಿಧಾನಕ್ಕೆ ಬದ್ಧರಾಗಿ ದೇಶದಲ್ಲಿ ಜೀವನ ಸಾಗಿಸುತ್ತಿದ್ದೇವೆ. ಆದರೆ, ಚಂದ್ರಶೇಖರ ಸ್ವಾಮೀಜಿಯವರು ಮುಸ್ಲಿಂ ಧರ್ಮವನ್ನ ಗುರಿಯಾಗಿಸಿಕೊಂಡು ಮಾತನಾಡುವ ಮೂಲಕ ನಮ್ಮ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ. ಧರ್ಮಗಳ ನಡುವೆ ಮತೀಯ ದ್ವೇಷ, ವೈರತ್ವ ಮೂಡುವಂತೆ ಪ್ರಚೋದನಕಾರಿ ಭಾಷಣ ಮಾಡಿರುವ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೈಯದ್ ಅಬ್ಬಾಸ್ ಮನವಿ ಮಾಡಿದ್ದಾರೆ. ದೂರಿನ ಅನ್ವಯ ಚಂದ್ರಶೇಖರ ಸ್ವಾಮಿಜಿಯವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 299 (ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಕ್ಫ್ ಮಂಡಳಿಯು ರೈತರಿಗೆ ನೀಡಿರುವ ನೋಟಿಸ್‌ಗಳನ್ನು ಖಂಡಿಸಿ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರ್‌ಎಸ್‌ಎಸ್) ಸಂಯೋಜಿತವಾಗಿರುವ ರೈತ ಸಂಘಟನೆಯಾದ ಭಾರತೀಯ ಕಿಸಾನ್ ಸಂಘ ಮಂಗಳವಾರ ಬೆಂಗಳೂರಿನಲ್ಲಿ ರೈತ ಘರ್ಜನೆ ಪ್ರತಿಭಟನಾ ರ್ಯಾಲಿ ಆಯೋಜಿಸಿತ್ತು. ಈ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಚಂದ್ರಶೇಖರನಾಥ ಸ್ವಾಮೀಜಿಯವರು ಈ ಹೇಳಿಕೆ ನೀಡಿದ್ದರು.