ಕರ್ನಾಟಕ

karnataka

ETV Bharat / state

ರಾಜ್ಯದ ಬಹುತೇಕ ಭಾಗಗಳಲ್ಲಿ 5 ದಿನ ಬಿಸಿ ಗಾಳಿ: ಹವಾಮಾನ ಇಲಾಖೆ ಎಚ್ಚರಿಕೆ - Heatwave Alert - HEATWAVE ALERT

ರಾಜ್ಯದಲ್ಲಿ ಮುಂದಿನ 5 ದಿನಗಳವರೆಗೆ ಬಿಸಿ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.

heat-wave-alert
ರಾಜ್ಯದ ಬಹುತೇಕ ಭಾಗಗಳಲ್ಲಿ ಐದು ದಿನ ಬಿಸಿ ಗಾಳಿ

By ETV Bharat Karnataka Team

Published : Apr 25, 2024, 4:10 PM IST

ಬೆಂಗಳೂರು: ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿ ಗಾಳಿ(ಹೀಟ್ ವೇವ್) ಬೀಸಲಿದೆ. ಜನರು ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಮನೆಗಳಿಂದ ಹೊರಗಡೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈ ಜಿಲ್ಲೆಗಳ ಜನರು ಎಚ್ಚರಿಕೆ ವಹಿಸಿ: ಮುಖ್ಯವಾಗಿ, ಗುರುವಾರದಿಂದ 5 ದಿನಗಳವರೆಗೆ ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ತುಮಕೂರು, ಮಂಡ್ಯ, ಗದಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉಷ್ಣ ಅಲೆಯ ಪರಿಸ್ಥಿತಿಗಳೊಂದಿಗೆ ಬಿಸಿ ಮತ್ತು ಆರ್ದ್ರ ವಾತಾವರಣ ಇರಲಿದೆ ಎಂದು ಮುನ್ಸೂಚನೆ ನೀಡಿದೆ.

ಏಪ್ರಿಲ್ 25 ರಿಂದ 29 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಯು ಮೇಲುಗೈ ಸಾಧಿಸಲಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್​ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏನು ಮಾಡಬೇಕು?: ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ದುರ್ಬಲ ಜನರು ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿಯ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ ಅಥವಾ ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಧರಿಸಬೇಕು.

ಏನು ಮಾಡಬಾರದು?: ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು. ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಮನೆಯಿಂದ ಹೊರಗಡೆ ಕೆಲಸ ಮಾಡುವುದನ್ನು ಬಿಡಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತ್ಯಜಿಸಬೇಕು. ಹೆಚ್ಚಿನ ಪ್ರೋಟೀನ್ ಆಹಾರವನ್ನು ಮತ್ತು ಹಳೆಯ ಆಹಾರವನ್ನು ಸೇವಿಸಬಾರದು.

''ಸುಡುವ ಸೂರ್ಯನಿಗೆ ದೀರ್ಘಕಾಲ ತೆರೆದುಕೊಳ್ಳುವವರಲ್ಲಿ ಶಾಖ ಸಂಬಂಧಿತ ಅನಾರೋಗ್ಯದ ಸಾಧ್ಯತೆ ಹೆಚ್ಚಾಗುತ್ತದೆ. ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ದಾಟಿದಾಗ ಅಥವಾ ನಿರ್ದಿಷ್ಟ ಜಿಲ್ಲೆಯ ತಾಪಮಾನವು ಸಾಮಾನ್ಯಕ್ಕಿಂತ 4.5 ಡಿಗ್ರಿ ಸೆಲ್ಸಿಯಸ್ ಹೆಚ್ಚಾದಾಗ ಹೀಟ್ ವೇವ್ ಅಲರ್ಟ್ ನೀಡಲಾಗುತ್ತದೆ'' ಎಂದು ಬೆಂಗಳೂರು ಹವಾಮಾನ ಕೇಂದ್ರದ ಎಲ್.ಎ.ಸಿ.ಡಿ ಮುಖ್ಯಸ್ಥರಾದ ವಿಜ್ಞಾನಿ ಡಾ.ಎಂ.ರಾಜವೇಲ್ ತಿಳಿಸಿದ್ದಾರೆ.

ಇದನ್ನೂ ಓದಿ:ತೆಲಂಗಾಣದಲ್ಲಿ ತಾಪಮಾನ ಏರಿಕೆ, ಸನ್‌ಸ್ಟ್ರೋಕ್‌ಗೆ ಮೂವರು ಸಾವು - Temperature Rises In Telangana

ABOUT THE AUTHOR

...view details