ಹುಬ್ಬಳ್ಳಿ: ಬಾಲಕಿಯೊರ್ವಳನ್ನು ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇಹುಬ್ಬಳ್ಳಿ ಠಾಣೆಯ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಹಳೇಹುಬ್ಬಳ್ಳಿಯ ಅಯೋಧ್ಯೆ ನಗರದ ನಿವಾಸಿಗಳಾದ ಶುಭಂ ತಡಸ, ಮೆಹಬೂಬ್ ಹಿತ್ತಲಮನಿ ಎಂದು ಗುರುತಿಸಲಾಗಿದೆ. ಈ ಆರೋಪಿಗಳಿಗೆ ಸಹಕರಿಸಿದ ಸಾಗರ ಸಾತಪುತೆ, ಶ್ರೀವತ್ಸವ ಬೆಂಡಿಗೇರಿ, ಸಚಿನ್ ನರೇಂದ್ರ ಎಂಬವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಪ್ರತಿಕ್ರಿಯೆ (ETV Bharat) ಬಂಧಿತರಿಂದ ಆರು ಮೊಬೈಲ್ ಮತ್ತು ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನು ಶುಭಂ ತಡಸ ವಿರುದ್ಧ ಕಸಬಾಪೇಟೆ ಮತ್ತು ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಎರಡು ಪ್ರಕರಣಗಳು ದಾಖಲಾಗಿವೆ. ಸಾಗರ ಸಾತಪುತೆ ವಿರುದ್ಧ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳಿವೆ. ಸಚಿನ್ ನರೇಂದ್ರ ಎಂಬಾತನ ವಿರುದ್ಧ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಸದ್ಯ ಈ ಕುರಿತು ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪೋಕ್ಸೋ ಪ್ರಕರಣ ಕೂಡ ದಾಖಲಾಗಿದೆ.
ಬೀದಿಕಾಮಣ್ಣರಿಗೆ ಕಮಿಷನರ್ ಖಡಕ್ ಎಚ್ಚರಿಕೆ: ಈ ಕುರಿತಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಪ್ರತಿಕ್ರಿಯಿಸಿ "ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಚುಡಾಯಿಸಿದ ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣ ದಾಖಲಾಗಿದೆ. 14 ವರ್ಷದ ಬಾಲಕಿ ಶಾಲೆ ಮುಗಿಸಿ ಮನೆಗೆ ತೆರಳುವ ಸಂದರ್ಭದಲ್ಲಿ ಕಿಡಿಗೇಡಿಗಳಿಬ್ಬರು ಬೈಕ್ ಮೇಲೆ ಬಂದಿದ್ದು, ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದರು. ಈ ಕುರಿತು ಸಿಸಿ ಕ್ಯಾಮರಾದಲ್ಲಿ ದೃಶ್ಯಾವಳಿಗಳು ಸೆರೆಯಾಗಿದ್ದವು. ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತು. ಬಳಿಕ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ವಿರುದ್ಧ ಬಿ.ಎನ್.ಎಸ್ ಮತ್ತು ಪೋಕ್ಸೋ ಕಾಯ್ದೆ ಪ್ರಕರಣವನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ" ಎಂದು ತಿಳಿಸಿದರು.
ಹಾಗೇ "ನಗರದ ಶಾಲೆ-ಕಾಲೇಜು, ಮಾರುಕಟ್ಟೆ, ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತನೆ ತೋರುವ ದುಷ್ಟರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಮಹಿಳೆ ಅಥವಾ ಮಕ್ಕಳು ದೂರು ದಾಖಲಿಸಲು ಹಿಂದೇಟು ಹಾಕಿದರೆ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸಿದ್ಧವಾಗಿದೆ. ಸಾರ್ವಜನಿಕರು ಕೂಡ ಇಂತಹ ಪ್ರಕರಣ ಗಮನಕ್ಕೆ ಬಂದಾಗ ಪೊಲೀಸರಿಗೆ ಮಾಹಿತಿ ನೀಡಬೇಕು. ಅಂತವರ ಮಾಹಿತಿಯನ್ನು ಗೌಪ್ಯವಾಗಿಟ್ಟು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು" ಎಂದೂ ಕಮಿಷನರ್ ಖಡಕ್ ಎಚ್ಚರಿಕೆ ನೀಡಿದರು.
ಇದನ್ನೂ ಓದಿ:ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಪ್ರಕರಣ: 1.50 ಕೋಟಿ ವಂಚನೆ, ಆರೋಪಿಗಳು ಅರೆಸ್ಟ್