ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮಾ.12 ರಂದು ರಾಜ್ಯಾದ್ಯಂತ ಪಂಜಿನ ಪ್ರತಿಭಟನೆ, ರೈತರ ಆಕ್ರೋಶ ದಿನ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು. ಜಲದರ್ಶಿನಿ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಜಾಬ್, ಹರಿಯಾಣ ರೈತರು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಗಾಗಿ ಪ್ರಬಲ ಹೋರಾಟ ನಡೆಸುತ್ತಿದ್ದರು. ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸದೇ ಪೊಲೀಸ್ ಬಲದ ಮೂಲಕ ಚಳವಳಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದರು.
ರೈತರ ಜೊತೆ ನಾಲ್ಕು ಸಭೆ ನಡೆಸಿದ ನಾಟಕವಾಡಿ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ನೀತಿ ಅನುಸರಿಸುತ್ತಿದೆ. ಇದರ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ರೈತ ಸಂಘಟನೆಯ ಹೋರಾಟ ಬೆಂಬಲಿಸಲು 12 ರಂದು ರಾಜ್ಯಾದ್ಯಂತ ರೈತರ ಪಂಜಿನ ಪ್ರತಿಭಟನೆ, ರೈತರ ಆಕ್ರೋಶ ದಿನ ಆಚರಿಸಲು ತೀರ್ಮಾನಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ರೈತ ಸಂಘಟನೆಗಳು ಪಂಜಿನ ಪ್ರತಿಭಟನಾ ಮೆರವಣಿಗೆ ನಡೆಸುತ್ತಾರೆ ಎಂದು ತಿಳಿಸಿದರು.
ಮಾ.15 ರ ನಂತರ ಧಾರವಾಡದಲ್ಲಿ ರೈತರು ಟ್ರ್ಯಾಕ್ಟರ್ ರ‍್ಯಾಲಿ ನಡೆಸಿ ಚಳವಳಿಯನ್ನು ಇನ್ನಷ್ಟು ತೀವ್ರಗೊಳಿಸಲು ತೀರ್ಮಾನಿಸಲಾಗಿದೆ. ಇನ್ನು ರಾಜ್ಯಾದ್ಯಂತ ಬರದ ಬವಣೆಯಿಂದ ಕುಡಿಯುವ ನೀರು, ದನಕರುಗಳಿಗೆ ಮೇವಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಸರ್ಕಾರ ಕೂಡಲೇ ಸಮರೋಪಾದಿಯಲ್ಲಿ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.