ಮೈಸೂರು: ಈ ಬಾರಿ ನಾಡಹಬ್ಬ ದಸರಾದಲ್ಲಿ ಭಾಗವಹಿಸುವ ಅಭಿಮನ್ಯು ನೇತೃತ್ವದ 9 ಗಜಪಡೆಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನ ಹೊಸಹಳ್ಳಿಯಲ್ಲಿ ಇಂದು ಬೆಳಗ್ಗೆ 10.20 ರಿಂದ 10.45ರ ತುಲಾ ಶುಭಲಗ್ನದಲ್ಲಿ ಗಣ್ಯರಿಂದ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಮೊದಲ ಹಂತದ ಗಜ ಪಯಣಕ್ಕೆ ಚಾಲನೆ ನೀಡಲಾಯಿತು.
ಇಂದು ಮೊದಲ ಹಂತದಲ್ಲಿ 9 ದಸರಾ ಆನೆಗಳು ಮೈಸೂರಿಗೆ ಆಗಮಿಸುತ್ತಿದ್ದು, ಗಜಪಯಣಕ್ಕೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕೃತ ಚಾಲನೆ ನೀಡಿದರು. ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.
ಸಚಿವ ಹೆಚ್.ಸಿ.ಮಹದೇವಪ್ಪ ಮಾತನಾಡಿ, "ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ ಕಂಜನ್, ಏಕಲವ್ಯ, ಭೀಮ, ಲಕ್ಷ್ಮೀ, ವರಲಕ್ಷ್ಮಿ, ರೋಹಿತ್, ಧನಂಜಯ ಹಾಗೂ ಗೋಪಿ ಆನೆಗಳು ಮೈಸೂರಿಗೆ ಆಗಮಿಸಲಿವೆ. ಮೈಸೂರಿನ ಅಶೋಕಪುರದ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿ, ಅಗಸ್ಟ್ 23 ರಂದು ಅರಮನೆಗೆ ಸ್ವಾಗತ ಮಾಡಿ ಆನೆಗಳನ್ನು ಬರಮಾಡಿಕೊಳ್ಳಲಾಗುವುದು" ಎಂದರು.
"ಆನೆ ಕಾಡಿನ ಸಂಪತ್ತು, ವನ್ಯ ಜೀವಿಗಳು ಹಾಗೂ ವನ್ಯ ಸಂರಕ್ಷಣೆ ದೇಶಕ್ಕೆ ಅತ್ಯಗತ್ಯ. ಪರಿಸರ ಸಂರಕ್ಷಣೆ ಹಾಗೂ ವನ್ಯ ಸಂರಕ್ಷಣೆ ಮಾಡದಿದ್ದರೆ ಮಾನವ ಉಳಿಯುವುದು ಕಷ್ಟ. ಈ ವರ್ಷ ಮೈಸೂರಿನಲ್ಲಿದ್ದ 40 ಡಿಗ್ರಿವರೆಗಿನ ಉಷ್ಣಾಂಶಕ್ಕೆ ಪರಿಸರ ನಾಶವೇ ಕಾರಣ. ಆದ್ದರಿಂದ ಪರಿಸರವನ್ನು ರಕ್ಷಿಸಲು ಎಲ್ಲರೂ ಪಣತೊಡಬೇಕು" ಎಂದು ತಿಳಿಸಿದರು.
ಅರ್ಜುನ ಆನೆ 14 ಬಾರಿ ದಸರಾದಲ್ಲಿ ಭಾಗವಹಿಸಿ, 9 ಬಾರಿ ಅಂಬಾರಿ ಹೊತ್ತು, ವೀರ ಮರಣ ಹೊಂದಿದೆ. ಮಾನವ ಹಾಗೂ ಪ್ರಾಣಿ ಸಂಘರ್ಷಕ್ಕೆ ಕಾರಣವಾಗುತ್ತಿರುವ ಅರಣ್ಯ ನಾಶ ಮತ್ತು ಒತ್ತುವರಿಯನ್ನು ತಡೆಗಟ್ಟಬೇಕು. ಈ ಬಾರಿ ನಾಡಿನಲ್ಲಿ ಉತ್ತಮವಾಗಿ ಮಳೆಯಾಗಿದ್ದು, ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಆದ್ದರಿಂದ ಮುಖ್ಯಮಂತ್ರಿಗಳು ಈ ಬಾರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ತಿಳಿಸಿದ್ದಾರೆ. ಅದರಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ" ಎಂದು ತಿಳಿಸಿದರು.
ಕಿರು ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ, "ಅರ್ಜುನ ಆನೆಗೆ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದೆ. 2ನೇ ಹಂತದಲ್ಲಿ 5 ಆನೆಗಳು ದಸರಾಗೆ ಆಗಮಿಸಲಿವೆ. ಮೈಸೂರಿನ ಅಂದಿನ ಮಹಾರಾಜರಾದ ಜಯ ಚಾಮರಾಜೇಂದ್ರ ಒಡೆಯರ್ ಅವರು ಹೆಚ್.ಡಿ. ಕೋಟೆಯ ಮಾಸ್ತಿ ಗುಡಿ ಬಳಿ ಆನೆಗಳಿಗೆ ಪೂಜೆ ಮಾಡಿ ಚಾಲನೆ ನೀಡುತ್ತಿದ್ದರು. ಈಗ ವೀರನ ಹೊಸಹಳ್ಳಿ ಬಳಿ ಚಾಲನೆ ನೀಡಲಾಗುತ್ತಿದೆ. ಅನೆಗಳಿಗೆ ಪೌಷ್ಟಿಕ ಆಹಾರ ನೀಡಲಾಗುತ್ತದೆ. ಪ್ರತೀ ವರ್ಷ 20ರಿಂದ 30 ಜನ ಆನೆ ತುಳಿತದಿಂದ ಮರಣ ಹೊಂದುತ್ತಿದ್ದಾರೆ. ಇದನ್ನು ತಡೆಗಟ್ಟಲು ರೈಲ್ವೆ ಬ್ಯಾರಿಕೇಡ್ ಮಾಡಲಾಗುತ್ತಿದೆ." ಎಂದರು.