ಬೆಳ್ತಂಗಡಿ (ದಕ್ಷಿಣ ಕನ್ನಡ):ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.
ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು ಸಂಜೆ 4 ಗಂಟೆ ವೇಳೆಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯಲ್ಲಿ 5 ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಕೆ. ವಸಂತ ಬಂಗೇರ ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು. ನಾಯಕನ ಅಗಲಿಕೆಗೆ ಸಾವಿರಾರು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ತಲುಪುದ ನಿರೀಕ್ಷೆ ಇದೆ. ಬಳಿಕ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗಣ್ಯರಿಂದ ಸಂತಾಪ:ಮಾಜಿ ಶಾಸಕರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ''ನನ್ನ ಆತ್ಮೀಯ ಗೆಳೆಯ ಮತ್ತು ದೀರ್ಘ ಕಾಲದ ಸಹದ್ಯೋಗಿ ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನೇರ, ನಿಷ್ಠುರ ನಡೆ-ನುಡಿಯ ಬಂಗೇರ, ಆಂತರ್ಯದಲ್ಲಿ ಅಪಾರವಾದ ಜನಪರ ಕಾಳಜಿ ಮತ್ತು ಸ್ನೇಹನಿಷ್ಠೆಯನ್ನು ಹೊಂದಿದ್ದ ದೊಡ್ಡ ಮನುಷ್ಯ''.
''ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಂಗೇರ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಮಾತನಾಡಿಸಿದ್ದೆ. ಇಷ್ಟು ಬೇಗ ನಮ್ಮನ್ನು ಅಗಲಿ ಹೋಗುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ. ಬಂಗೇರ ಅವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ'' ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
''ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ನಾಯಕರಾದ ಶ್ರೀ ವಸಂತ ಬಂಗೇರಾ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಬೆಳ್ತಂಗಡಿ ಕ್ಷೇತ್ರದಿಂದ ಪ್ರತಿನಿಧಿಸಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಬಂಗೇರಾ ಅವರು ಹಲವು ಜನಪರ ಕಾರ್ಯಗಳ ಮೂಲಕ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬಸ್ಥರಿಗೆ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ'' ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.