ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಗೆಲ್ಲುವ ನಾಲ್ಕು ಕ್ಷೇತ್ರಗಳ ಹೆಸರನ್ನು ಮತ್ತು ಕಾಂಗ್ರೆಸ್ ಪಕ್ಷದ ಮುಂದಿನ ಪ್ರಧಾನಿ ಯಾರೆಂದು ಹೇಳಲಿ. ಈ ಕುರಿತು ಅವರಲ್ಲಿ ಸ್ಪಷ್ಟತೆ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜ್ಯದಲ್ಲಿ 20 ಕ್ಷೇತ್ರಗಳನ್ನು ಗೆಲ್ಲುವ ಹೇಳಿಕೆ ವಿಚಾರವಾಗಿ ಈ ರೀತಿ ಪ್ರತಿಕ್ರಿಯಿಸಿದರು.
ನಾವು ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ನಿರೀಕ್ಷೆ ಇದೆ. ಶಿವಮೊಗ್ಗದಲ್ಲಿ ರಾಘವೇಂದ್ರ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತಾರೆ. ರಾಜ್ಯಾದ್ಯಂತ ಮೋದಿ ಪರವಾದ ಅಲೆ ಇದೆ. ಅಮಿತ್ ಶಾ ನಾಳೆ ಬೆಂಗಳೂರಿಗೆ ಬರುತ್ತಿದ್ದಾರೆ. ಅವರ ಸಮಾವೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಜನ ಸೇರುತ್ತಾರೆ. ಶಾ ಅವರನ್ನು ಶಿವಮೊಗ್ಗಕ್ಕೆ ಕರೆಸುವ ಬಗ್ಗೆ ಚರ್ಚೆಯಾಗಿಲ್ಲ ಎಂದು ಹೇಳಿದ ಅವರು, ಈಶ್ವರಪ್ಪ ನಾಮಪತ್ರ ಹಿಂಪಡೆಯದ ವಿಚಾರಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಯತೀಂದ್ರ ಸಿದ್ದರಾಮಯ್ಯ ಅವರು ಮೋದಿ ವಿರುದ್ಧ ಟೀಕೆ ಮಾಡಿದ ವಿಚಾರವಾಗಿ ಮಾತನಾಡಿ, ಹಗುರವಾಗಿ ಮಾತನಾಡುವವರಿಗೆ ನಾನೇನೂ ಮಾತನಾಡಲು ಆಗುತ್ತದೆ. ರಸ್ತೆಯಲ್ಲಿ ಹೋಗುವರೆಲ್ಲ ಮಾತನಾಡಿದರೆ ಮೋದಿ ಗೌರವ ಕಡಿಮೆಯಾಗುವುದಿಲ್ಲ ಎಂದು ಹೇಳಿದರು.
ನೇಹಾ ಹೀರೆಮಠ್ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹೀರೆಮಠ್ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿರುವುದನ್ನು ಸ್ವಾಗತಿಸುತ್ತೇನೆ. ಸಿಐಡಿ ತನಿಖೆಯಿಂದ ಹೆಚ್ಚು ವಾಸ್ತವದ ಸತ್ಯ ಹೊರಬೀಳಲಿದೆ ಎಂದು ತಿಳಿಸಿದರು.