ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಅವರು ಇದೀಗ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಎರಡೂವರೆ ದಶಕಗಳ ಬಳಿಕ ಮತ್ತೊಮ್ಮೆ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಡುತ್ತಿದ್ದಾರೆ.
ಕರ್ನಾಟಕದ ಪ್ರಭಾವಿ ರಾಜಕೀಯ ನಾಯಕರಲ್ಲಿ ಒಬ್ಬರಾಗಿರುವ ಕುಮಾರಸ್ವಾಮಿ ಅವರು ತಮ್ಮ ತಂದೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪ್ರಭಾವದ ಹೊರತಾಗಿಯೂ ತಮ್ಮದೇ ಆದ ವರ್ಚಸ್ಸಿನ ಮೂಲಕ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದಾರೆ. ಕೇವಲ ರಾಜಕೀಯ ಮಾತ್ರವಲ್ಲದೆ ಸಿನಿಮಾ ಕ್ಷೇತ್ರದಲ್ಲೂ ತೊಡಗಿಸಿಕೊಂಡಿರುವ ಹೆಚ್ಡಿಕೆ, ಹಲವಾರು ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿ ಸೈ ಎನಿಸಿಕೊಂಡಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ನಿರ್ಮಾಪಕರಾಗಿ, ವಿತರಕರಾಗಿಯೂ ಗುರುತಿಸಿಕೊಂಡಿದ್ದಾರೆ. ಇದರ ಜೊತೆಗೆ ಬಿಡದಿ ಸಮೀಪ ಜಮೀನು ಖರೀದಿಸಿ ಕೃಷಿಕರಾಗಿಯೂ ಕಾರ್ಯನಿರ್ವಹಿಸುತ್ತಿರುವ ಹೆಗ್ಗಳಿಕೆ ಅವರದ್ದು.
ರಾಜಕೀಯ ಅನುಭವವಿಲ್ಲದಿದ್ದರೂ ಪ್ರಥಮ ಬಾರಿಗೆ 1996ರಲ್ಲಿ ಚುನಾವಣಾ ರಾಜಕೀಯ ಪ್ರವೇಶಿಸಿದ ಕುಮಾರಸ್ವಾಮಿ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. 1998ರಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಹಾಗೂ 1999ರಲ್ಲಿ ಸಾತನೂರು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡ ಅವರು, 2004ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಗೆದ್ದು ವಿಧಾನಸಭೆ ಪ್ರವೇಶಿಸಿದರು.
ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಸ್ಥಾಪನೆ ಕಾಲದಲ್ಲಿ ಕುಮಾರಸ್ವಾಮಿ ಅವರು ಜೆಡಿಎಸ್ನ ಕಾರ್ಯಾಧ್ಯಕ್ಷರಾದರು. 2005ರ ಡಿಸೆಂಬರ್ನಲ್ಲಿ ನಡೆದ ಜಿಲ್ಲಾ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪರಿಸ್ಥಿತಿ ಬದಲಾಯಿತು. ಮೈತ್ರಿಯಿಂದ ಹೊರ ಬಂದರು. ಸಿದ್ದರಾಮಯ್ಯ ನಡುವಿನ ಮೈತ್ರಿ ಮಾತುಕತೆಯಿಂದ ಬೇಸರಗೊಂಡು 2006ರ ಜನವರಿಯಲ್ಲಿ ತಮ್ಮ ತಂದೆ ಹೆಚ್.ಡಿ.ದೇವೇಗೌಡ ಇಚ್ಛೆಗೆ ವಿರುದ್ಧವಾಗಿ ತಮ್ಮ ಪಕ್ಷದ 46 ಶಾಸಕರೊಂದಿಗೆ ಹೊರ ಬಂದು ಕಾಂಗ್ರೆಸ್ನ ಧರ್ಮಸಿಂಗ್ ನೇತೃತ್ವದ ಸರ್ಕಾರಕ್ಕೆ ಕೊಟ್ಟ ಬೆಂಬಲ ವಾಪಸ್ ಪಡೆದರು.
ಬಳಿಕ 2006 ಫೆಬ್ರವರಿಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಕುಮಾರಸ್ವಾಮಿ ಅವರು, ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಜೆಡಿಎಸ್ ಹಾಗೂ ಬಿಜೆಪಿ ಸೇರಿ ತಲಾ 20 ತಿಂಗಳು ಸರ್ಕಾರ ನಡೆಸುವ ಒಪ್ಪಂದವಾಗಿತ್ತು. ಆದರೆ, ಒಪ್ಪಂದದಂತೆ ಬಾಕಿ 20 ತಿಂಗಳ ಅವಧಿಗೆ ಬಿಜೆಪಿಗೆ ಅಧಿಕಾರ ಹಸ್ತಾಂತರಿಸಲು ನಿರಾಕರಿಸಿದಾಗ, 2007ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮೈತ್ರಿ ಒಪ್ಪಂದವೂ ಮುರಿದು ಬಿತ್ತು.
2018ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದರು. ಆದರೆ, ರಾಜಕೀಯ ಒಳಬೇಗುದಿಗೆ ಸಿಲುಕಿದ ಕುಮಾರಸ್ವಾಮಿ 14 ತಿಂಗಳು ಮಾತ್ರವೇ ಮುಖ್ಯಮಂತ್ರಿ ಸ್ಥಾನದಲ್ಲಿರಲು ಸಾಧ್ಯವಾಯಿತು. ಕಾಂಗ್ರೆಸ್ನ ಕೆಲ ನಾಯಕರ ಚಿತಾವಣೆಯಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ನ ಕೆಲವು ಶಾಸಕರು ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದರಿಂದ ಬಹುಮತ ಕಳೆದುಕೊಂಡ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡಿತು. ಬಳಿಕ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಆಡಳಿತದ ಅವಧಿ ಪೂರೈಸಿತು. 2023ರ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಕಾಂಗ್ರೆಸ್, ಸರ್ಕಾರ ರಚನೆ ಮಾಡಿದೆ.
2004, 2008, 2013 ಮತ್ತು 2018ರಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿಯಾಗಿದ್ದರು. ಇದೇ ವೇಳೆ ಚನ್ನಪಟ್ಟಣದಿಂದಲೂ ಸ್ಪರ್ಧಿಸಿ ಗೆದ್ದರು. ಆದರೆ, ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ನಂತರ ಉಪ ಚುನಾವಣೆಯಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ರಾಮನಗರ ಕ್ಷೇತ್ರದಿಂದ ಗೆಲ್ಲಿಸಿಕೊಂಡು ಬಂದಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. 2013ರಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿಯೂ ಕೆಲಸ ಮಾಡಿದ್ದರು. ಎರಡು ಬಾರಿ ಜೆಡಿಎಸ್ನ ರಾಜ್ಯಾಧ್ಯಕ್ಷರಾಗಿದ್ದಾರೆ. ಎರಡು ಬಾರಿ ಲೋಕಸಭೆಗೆ ಸ್ಪರ್ಧಿಸಿದ್ದಾರೆ. ಇದೀಗ ಮತ್ತೊಮ್ಮೆ ಲೋಕಸಭೆಗೆ ಸ್ಪರ್ಧಿಸಲು ಕುಮಾರಸ್ವಾಮಿ ಅವರು ಮುಂದಾಗಿದ್ದಾರೆ.
ರಾಜಕೀಯ ಲೆಕ್ಕಾಚಾರವೇನು?: ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಗ್ಗೆ ಹಲವು ರಾಜಕೀಯ ಲೆಕ್ಕಾಚಾರಗಳು ಇವೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಸೋಲಿಸಲು ಕುಮಾರಸ್ವಾಮಿ ಅವರಿಂದ ಮಾತ್ರ ಸಾಧ್ಯ ಎನ್ನುವುದು ಅಲ್ಲಿನ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ. ಇದರ ಜೊತೆಗೆ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ಸಹಕಾರಿಯಾಗುತ್ತದೆ. ಅಲ್ಲಿ ಅವರಿಗೆ ಅಭಿಮಾನಿ ಬಳಗವೇ ಇದೆ. ಹೆಚ್ಡಿಕೆ ಸ್ಪರ್ಧೆಯಿಂದ ಜೆಡಿಎಸ್ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚುತ್ತದೆ ಎಂಬುದು ರಾಜಕೀಯ ಲೆಕ್ಕಾಚಾರ.
ಜೆಡಿಎಸ್ಗೆ ಈಗ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ಈ ಕಾರಣಕ್ಕಾಗಿಯೇ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳಿಂದ ನೆಲ ಕಚ್ಚಿರುವ ಪಕ್ಷವನ್ನು ಮತ್ತೆ ಗಟ್ಟಿಗೊಳಿಸಬೇಕಿದೆ. ಈ ಕಾರಣಕ್ಕೆ ಜೆಡಿಎಸ್ಗೆ ಸಿಕ್ಕಿರುವ ಮೂರೂ ಕ್ಷೇತ್ರಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಇದೇ ಕಾರಣಕ್ಕೆ ತಾವು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದರೆ ಜನರು ಮತ ಹಾಕಿ ಜೆಡಿಎಸ್ ಅನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ಅವರದ್ದು. ಇದರ ಜೊತೆಗೆ ಎನ್ಡಿಎ ಸರ್ಕಾರ ರಚನೆ ನಂತರ ಕೇಂದ್ರದಲ್ಲಿ ಮಂತ್ರಿ ಸ್ಥಾನವೂ ಸಿಗುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ. ಹಾಗಾಗಿ, ರಾಜಕೀಯವಾಗಿ ಮತ್ತಷ್ಟು ಶಕ್ತಿ ಪಡೆಯಬಹುದು ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ.
ಇದನ್ನೂ ಓದಿ:ನಂಜುಂಡೇಶ್ವರನ ಸನ್ನಿಧಿಯಲ್ಲಿ ತುಲಾಭಾರ ಸೇವೆಯ ಹರಕೆ ತೀರಿಸಿದ ಹೆಚ್.ಡಿ ಕುಮಾರಸ್ವಾಮಿ - HDK Visits Nanjanagudu