ಬೆಂಗಳೂರು:ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ಅನ್ನು ಈ ಬಾರಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ನೀಡಲಾಗಿದೆ. ಈ ಕ್ಷೇತ್ರದ ಸಂಸದರಾದ ಸದಾನಂದ ಗೌಡ ಅವರಿಗೆ ಟಿಕೆಟ್ ಕೈತಪ್ಪಿದೆ. ಈ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಸಾಮಾಜಿಕ ಜಾಲತಾಣದ ಮೂಲಕ ಎಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವುದು ಖಚಿತವಾದ ಹಿನ್ನೆಲೆ ಅವರು ಈ ರೀತಿಯಾಗಿ ತಮ್ಮ ಫೇಸ್ಬುಕ್ ಮುಖಪುಟದಲ್ಲಿ ಬರೆದಿಕೊಂಡಿದ್ದಾರೆ ಎಂದು ಹೇಳಲಾಗ್ತಿದೆ.
''ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ, ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿ ಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು'' ಎಂದು ಸದಾನಂದ ಗೌಡ ಬರೆದುಕೊಂಡಿದ್ದಾರೆ.
2023ರ ನವೆಂಬರ್ 8 ರಂದು ಹಾಸನ ಪ್ರವಾಸದಲ್ಲಿದ್ದ ಸದಾನಂದ ಗೌಡ ಅಚ್ಚರಿ ಬೆಳವಣಿಗೆಯಲ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪಗೆ ಟಿಕೆಟ್ ನೀಡದಿರುವ ನಿರ್ಧಾರ ತಿಳಿಸಿ ಚುನಾವಣಾ ರಾಜಕೀಯ ನಿವೃತ್ತಿ ಪಡೆಯುವ ನಿರ್ದೇಶನ ನೀಡಿತ್ತು. ಅದರಂತೆ ಈಶ್ವರಪ್ಪ ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದರು. ಅದಾದ ಕೆಲ ತಿಂಗಳ ನಂತರ ಸದಾನಂದ ಗೌಡರಿಗೂ ಇದೇ ರೀತಿಯ ಸಂದೇಶ ಬಂದಿತ್ತು. ಆ ರೀತಿಯ ಚರ್ಚೆಗಳ ನಡುವೆಯೇ ಸದಾನಂದ ಗೌಡರು ಚುನಾವಣಾ ರಾಜಕೀಯ ನಿವೃತ್ತಿ ಪ್ರಕಟಿಸಿದ್ದರು.