ರಾಮನಗರ:ರಾಜ್ಯ ಕಾಂಗ್ರೆಸ್ ಸರ್ಕಾರ ಖಜಾನೆಯನ್ನು ದಿವಾಳಿ ಮಾಡಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಲ್ಲಿ ಗೃಹಲಕ್ಷ್ಮಿ ಹಣವಿಲ್ಲ, ಈ ಉಪಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ದೂರಿದರು.
ಭಾನುವಾರ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಮತಯಾಚಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಪರಿಮಿತವಾಗಿ ಚುನಾವಣಾ ಅಕ್ರಮಗಳನ್ನು ಎಸಗುತ್ತಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೂಡ ಬಳಕೆ ಮಾಡಿಕೊಳ್ಳುತ್ತಿದೆ. ಈ ಸರ್ಕಾರ ದಿವಾಳಿಯಾಗಿದೆ. ಉಪಚುನಾವಣೆ ಮುಗಿದ ಮೇಲೆ ಗೃಹಲಕ್ಷ್ಮಿ ಹಣ ಜಮೆ ಮಾಡುವುದನ್ನು ನಿಲ್ಲಿಸುತ್ತಾರೆ ಎಂದರು.
ನಿಖಿಲ್ ಅವರನ್ನು ವಿಧಾನಸೌಧಕ್ಕೆ ಕಳಿಸಿ. ಆ ಹುಡುಗ ನಿಮ್ಮ ಪರವಾಗಿ ದನಿ ಎತ್ತುತ್ತಾನೆ. ಇದರಲ್ಲಿ ನಿಮಗೆ ಯಾವುದೇ ಸಂಶಯ ಬೇಡ. ನಾನೊಬ್ಬ ರೈತನ ಮಗ, ನೀವು ರೈತರ ಮಕ್ಕಳು. ಇಗ್ಗಲೂರು ಅಣೆಕಟ್ಟು ಕಟ್ಟಿಸಿದ್ದು ಈ ದೇವೇಗೌಡ. ಈ ಅಣೆಕಟ್ಟು ಕಟ್ಟಿಲ್ಲ ಅಂದರೆ ನೀರು ಹರಿಸೋಕೆ ಸಾಧ್ಯ ಆಗುತ್ತಿತ್ತಾ?. ಚನ್ನಪಟ್ಟಣ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರು 1600 ಕೋಟಿಯಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈಗಿರುವ ಸರ್ಕಾರ ಸಣ್ಣಪುಟ್ಟ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.