ಕಲಬುರಗಿ : ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಪೊಲೀಸರು ನಾಲ್ವರು ಕಿಡಿಗೇಡಿಗಳನ್ನ ಬಂಧಿಸಿದ್ದಾರೆ. ಕಲಬುರಗಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಬಾಬಾ ಸಾಹೇಬರಿಗೆ ಅಪಮಾನ ಮಾಡಿದ್ದು ಮನುವಾದಿಗಳೇ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ನಿನ್ನೆ ಇಡೀ ಕಲಬುರಗಿ ನಗರ ರಣರಂಗವಾಗಿ ಮಾರ್ಪಟ್ಟಿತ್ತು. ಕಲಬುರಗಿ ಹೊರವಲಯ ಕೊಟನೂರು (ಡಿ) ಗ್ರಾಮದ ಬಳಿ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಲ್ಬರ್ಗಾ ವಿಶ್ವವಿದ್ಯಾಲಯ ಠಾಣೆ ಪೊಲೀಸರು ನಾಲ್ವರನ್ನ ಅರೆಸ್ಟ್ ಮಾಡಿದ್ದಾರೆ. 26 ವರ್ಷದ ಕಿರಣ್, 25 ವರ್ಷದ ಹನುಮಂತ, 31 ವರ್ಷದ ಮಾನು ಹಾಗೂ 38 ವರ್ಷದ ಸಂಗಪ್ಪ ಅಲಿಯಾಸ್ ಸಂಗಮೇಶ್ ಈ ನಾಲ್ವರನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮತ್ತೋರ್ವನಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ್ ಆರ್ ಹೇಳಿದ್ದಾರೆ.
ನಿನ್ನೆ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಘಟನೆ ಖಂಡಿಸಿ ಕಲಬುರಗಿ ಮಹಾನಗರದಲ್ಲಿ ವಿವಿಧ ದಲಿತ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಉದ್ರಿಕ್ತರ ಗುಂಪು ಗೂಡ್ಸ್ ವಾಹನ, ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿ, ಜನರ ಆಸ್ತಿಗೆ ಹಾನಿ ಮಾಡಿದ್ರು. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಗುಲ್ಬರ್ಗಾ ವಿಶ್ವವಿದ್ಯಾಲಯ ಠಾಣೆ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ ಎಂದಿದ್ದಾರೆ.