ಬೆಂಗಳೂರು: ಮಾದಕ ದಂಧೆಯ ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು ಕಳೆದ ಒಂದು ವಾರದ ಅವಧಿಯಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಸಿಸಿಬಿಯ ಮಾದಕ ದ್ರವ್ಯ ನಿಗ್ರಹದಳ, ಕೋಣನಕುಂಟೆ ಠಾಣೆ ಹಾಗೂ ವಿ. ವಿ. ಪುರಂ ಠಾಣಾ ಪೊಲೀಸರ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ನಾಲ್ವರನ್ನ ಬಂಧಿಸಲಾಗಿದ್ದು, ಒಟ್ಟು 18.80 ಲಕ್ಷ ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನ ವಶಪಡಿಸಿಕೊಳ್ಳಲಾಗಿದೆ.
ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ಆಫ್ರಿಕಾದ ಘಾನಾ ಮೂಲದ ಸಿರಿಲ್ (23) ಹಾಗೂ ನೈಜೀರಿಯಾ ಮೂಲದ ಇಮ್ಯಾನ್ಯುಯೆಲ್ (27) ಎಂಬ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ಆರೋಪಿತರಿಂದ ಒಟ್ಟು 12 ಲಕ್ಷ ಮೌಲ್ಯದ ಎಂ.ಡಿ.ಎಂ.ಎ ಕ್ರಿಸ್ಟೆಲ್, ಎಕ್ಸ್‌ಟಿಸಿ ಪಿಲ್ಸ್, ಕೊಕೇನ್, ಒಂದು ದ್ವಿಚಕ್ರ ವಾಹನ ಮತ್ತು ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಉದ್ಯೋಗ ಹಾಗೂ ವಿದ್ಯಾರ್ಥಿ ವೀಸಾದಡಿ ಭಾರತಕ್ಕೆ ಬಂದಿದ್ದ ಆರೋಪಿಗಳು ಗೋವಾ, ಮುಂಬೈ ಮತ್ತು ದೆಹಲಿಯಲ್ಲಿ ವಾಸವಾಗಿರುವ ಅವರದ್ದೇ ದೇಶದ ಪ್ರಜೆಗಳಿಂದ ಮಾದಕ ವಸ್ತುಗಳನ್ನು ಕಡಿಮೆ ಬೆಲೆಗೆ ಖರೀದಿಸಿ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ.