ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸುವರ್ಣಸೌಧದಲ್ಲಿ 'ಗಾಂಧಿ ಭಾರತ' ಕಾರ್ಯಕ್ರಮದ ಲಾಂಛನ ಅನಾವರಣಗೊಳಿಸಿದರು.
ಬೆಳಗಾವಿಯಲ್ಲಿ ಇದೇ ಡಿಸೆಂಬರ್ 26 ಹಾಗೂ 27 ರಂದು ಗಾಂಧಿಭಾರತ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಮುಂಬರುವ 2025ರ ಅಕ್ಟೋಬರ್ 2ರವರೆಗೆ ರಾಜ್ಯಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನಕ್ಕೆ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಅಧಿವೇಶನ ಎಂಬ ಹಿರಿಮೆ ಇದೆ. ಈ ಸಂದರ್ಭದಲ್ಲಿ ಗಾಂಧೀಜಿಯವರ ಬದುಕು, ಹೋರಾಟ, ಸ್ವಾತಂತ್ರ್ಯ ಚಳುವಳಿ ಕುರಿತು ಮಕ್ಕಳು, ಯುವಜನರು ಸೇರಿದಂತೆ ಎಲ್ಲಾ ವಯೋಮಾನದ ಜನರಲ್ಲಿ ದೇಶಾಭಿಮಾನ, ಸತ್ಯ, ಅಹಿಂಸೆ, ಆರ್ಥಿಕ ಚಿಂತನೆಗಳು, ಸ್ವರಾಜ್, ಅಸ್ಪೃಶ್ಯತೆ ನಿವಾರಣೆ ಮತ್ತಿತರ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕಾರ್ಯಕ್ರಮಗಳನ್ನು ಸರ್ಕಾರ ಆಯೋಜಿಸುತ್ತಿದೆ.
ಕಾರ್ಯಕ್ರಮದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ, ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕ ಬಸವರಾಜ ರಾಯರೆಡ್ಡಿ, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿ ಇತರೆ ಗಣ್ಯರು ಇದ್ದರು.