ರಾಮನಗರ:ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ಗಳಲ್ಲಿ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಸೂಕ್ತ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ 10 ಕೆಜಿ ಚಿನ್ನ ಹಾಗೂ 5 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು - ಮೈಸೂರು ರಸ್ತೆಯ ತಾಲೂಕಿನ ಬಿಡದಿ ಹೋಬಳಿಯ ಹೆಜ್ಜಾಲ ಬಳಿ ನಿರ್ಮಿಸಲಾಗಿರುವ ಚೆಕ್‌ಪೋಸ್ಟ್ ಬಳಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ವಾಹನದಲ್ಲಿ ಚಿನ್ನ ಹಾಗೂ ಬೆಳ್ಳಿ ಸಾಗಿಸುತ್ತಿರುವುದು ಕಂಡು ಬಂದಿದ್ದು, ಜಪ್ತಿ ಮಾಡಲಾಗಿದೆ.
ಸೂಕ್ತ ದಾಖಲೆ ಇಲ್ಲದೆ ಸಾಗಣೆ ಮಾಡುತ್ತಿದ್ದ ಗೋಲ್ಡ್ ಕಂಪನಿಯೊಂದಕ್ಕೆ ಸೇರಿದ ಚಿನ್ನಾಭರಣ ಎಂದು ತಿಳಿದು ಬಂದಿದ್ದು, ಚೆಕ್‌ಪೋಸ್ಟ್ ಸಿಬ್ಬಂದಿ ವಾಹನ ತಡೆದು ಪರಿಶೀಲನೆ ನಡೆಸಿದಾಗ ಚಿನ್ನ ಮತ್ತು ಬೆಳ್ಳಿ ಆಭರಣವಿರುವುದು ಪತ್ತೆಯಾಗಿದೆ. ಮೈಸೂರಿನಲ್ಲಿರುವ ಮಳಿಗೆಗಳಿಗೆ ಬೆಂಗಳೂರಿನಿಂದ ಪ್ಯಾಕ್ ಮಾಡಿದ ಬಾಕ್ಸ್‌ಗಳಲ್ಲಿ ಆಭರಣಗಳನ್ನು ಕೊಂಡೊಯ್ಯುತ್ತಿರುವುದಾಗಿ ಕಂಪನಿಯ ಸಿಬ್ಬಂದಿ ಹೇಳಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ರಮೇಶ್ ತಿಳಿಸಿದ್ದಾರೆ.
ಜಪ್ತಿ ಮಾಡಿಕೊಂಡಿರುವ ಚಿನ್ನಕ್ಕೆ ಸದ್ಯ ಯಾವುದೇ ಸೂಕ್ತ ದಾಖಲೆ ಇಲ್ಲದಿರುವುದು ಪರಿಶೀಲನೆ ವೇಳೆ ಕಂಡುಬಂದಿದೆ ಎಂದು ಬಿಡದಿ ಪೊಲೀಸರು ತಿಳಿಸಿದ್ದಾರೆ.
ಓದಿ:ದಾವಣಗೆರೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹12.50 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ - Gold Seized