ಬೆಂಗಳೂರು : ಸಹಕಾರ ಸಂಘಗಳಲ್ಲಿ ನೇಮಕಾತಿ ವೃಂದ ರಚನೆ, ನೇಮಕಾತಿ ಮಾಡಿಕೊಳ್ಳುವುದು, ನೌಕರರ ವರ್ಗಾವಣೆ ಮತ್ತು ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರವನ್ನು ಸಹಕಾರ ಸಂಘಗಳಿಂದ ಮೊಟಕುಗೊಳಿಸಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128ಎ ಸಂವಿಧಾನ ಬಾಹಿರ ಎಂದು ಘೋಷಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ದ್ವಿಸದಸ್ಯ ಪೀಠ ಹೈಕೋರ್ಟ್ ವಿಚಾರಣೆಗೆ ಪರಿಗಣಿಸಿದೆ.
ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ವಿಭಾಗೀಯ ಪೀಠ, ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಆದರೆ, ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕು ಎಂಬ ಸರ್ಕಾರದ ಮನವಿ ಈ ಹಂತದಲ್ಲಿ ಪರಿಗಣಿಸಿಲ್ಲ. ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಕಾಯ್ದೆ-2023ರ ಸೆಕ್ಷನ್ 128-ಎ ಅಡಿ ಕರಡು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರ ಸ್ವತಂತ್ರವಾಗಿದ್ದು, ಅವುಗಳನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚಿಸಿ ವಿಚಾರಣೆಯನ್ನು ಮಾರ್ಚ್ 3ಕ್ಕೆ ನಿಗದಿಪಡಿಸಿತು.