ಕರ್ನಾಟಕ

karnataka

ETV Bharat / state

ಡ್ರಗ್ ಜಾಲದ ಬೇರು ಕತ್ತರಿಸಲು ತೀರ್ಮಾನ, ಗೃಹ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ: ಸಿಎಂ - Task Force To Control Drugs

ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಸಮರ ಮುಂದುರೆಸಿರುವ ಸರ್ಕಾರ, ಗೃಹ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಳತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

CM SIDDARAMAIAH
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗೋಷ್ಟಿ (CM X Post)

By ETV Bharat Karnataka Team

Published : Sep 18, 2024, 4:18 PM IST

ಬೆಂಗಳೂರು: ''ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನಿಸಲಾಗಿದ್ದು, ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅವರು ಮಾದಕ ವಸ್ತುಗಳ ಹಾವಳಿ ಮತ್ತು ನಿಯಂತ್ರಣ ಕುರಿತಂತೆ ಸಭೆ ನಡೆಸಿದರು.

ಬಳಿಕ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಸಿಎಂ, ''ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ. ಟಾಸ್ಕ್ ಫೋರ್ಸ್​ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಇರುತ್ತಾರೆ. ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ, ಠಾಣಾಧಿಕಾರಿ, ಡಿವೈಎಸ್​​ಪಿ, ಎಸಿಪಿ ಮತ್ತು ಎಸ್​ಪಿಗಳನ್ನು ಹೊಣೆ ಮಾಡಲು ತೀರ್ಮಾನಿಸಿದ್ದೇವೆ. ಇವರ ವಿರುದ್ಧ ಕ್ರಮ ಖಚಿತ'' ಎಂದು ಎಚ್ಚರಿಕೆ ನೀಡಿದರು.

''ಅಗತ್ಯಬಿದ್ದರೆ ಹೊಸ ಕಾನೂನು ಮಾಡುತ್ತೇವೆ. ಇರುವ ಕಾನೂನನ್ನು ಇನ್ನಷ್ಟು ಗಟ್ಟಿ ಮಾಡುತ್ತೇವೆ. ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮ ವಹಿಸಲಾಗುತ್ತದೆ. ಎನ್​ಸಿಸಿ, ಎನ್​ಜಿಒಗಳನ್ನು ಬಲಗೊಳಿಸುವುದನ್ನು ಗುರಿಯಾಗಿಸಿಕೊಂಡಿದ್ದೇವೆ. ಪುನರ್ವಸತಿ ಕೇಂದ್ರಗಳನ್ನು ಹೆಚ್ಚಿಸಲು, ಸಮರ್ಪಕಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಡ್ರಗ್ ಹಾವಳಿ ತೊಡೆದುಹಾಕಲು ಕ್ಷಿಪ್ರ ಮತ್ತು ತೀಕ್ಷ್ಣ ಕ್ರಮ ಕೈಗೊಳ್ಳುತ್ತೇವೆ. ವಿದ್ಯಾರ್ಥಿಗಳು, ಯುವ ಜನರು ಹಾಗೂ ಕುಟುಂಬಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವುದನ್ನು ತಡೆಯಲು ಕ್ರಮ ವಹಿಸುತ್ತೇವೆ'' ಎಂದರು.

ಹಲವು ಕ್ಷಿಪ್ರ ತೀರ್ಮಾನ: ''ಡ್ರಗ್ ಸೇವಿಸಿ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಕರಣಗಳಿಗೆ ಬ್ರೇಕ್ ಹಾಕಲಾಗುತ್ತದೆ‌. ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡುವ ಜೊತೆಗೆ, ಅವರನ್ನೇ ಹೊಣೆ ಮಾಡಿ ಕ್ರಮ ಕೂಡ ತೆಗೆದುಕೊಳ್ಳಲಾಗುವುದು. ಗೃಹ ಇಲಾಖೆ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ, ಸಮಾಜ‌ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿ ಹಲವು ಕ್ಷಿಪ್ರ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ವಿದ್ಯಾರ್ಥಿ-ಯುವ ಜನರ, ಪೋಷಕರ ಸಹಭಾಗಿತ್ವದಲ್ಲಿ ಮಾಹಿತಿ ಸಂಗ್ರಹಿಸಿ ಡ್ರಗ್ ಹಾವಳಿಗೆ ಬ್ರೇಕ್ ಹಾಕುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದೇವೆ'' ಎಂದು ಸಿಎಂ ತಿಳಿಸಿದರು.

ಹೊಸ ಕಾರ್ಯತಂತ್ರ:''ಈಗಾಗಲೇ ಇರುವ ರಾಜ್ಯಮಟ್ಟದ ಸಮಿತಿಯಿಂದ ಮಾಹಿತಿ, ಅಭಿಪ್ರಾಯ ಸಂಗ್ರಹಿಸಿದ್ದೇವೆ. ಜಾಗೃತಿ ಮತ್ತು ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರವಾಗಿ ನಡೆಸಲು ಸ್ಪಷ್ಟ ಸೂಚನೆ ನೀಡಲಾಗಿದೆ. ಬೆಂಗಳೂರು ಪೂರ್ವ ವಿಭಾಗದಲ್ಲಿ ಡ್ರಗ್ ಹಾವಳಿ ತೀವ್ರವಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದಕ್ಕೆ ಬಲಿ‌ ಹಾಕಲು ನಿರ್ಣಯ ಮಾಡಿದ್ದೇವೆ. ಒಡಿಶಾ, ಆಂಧ್ರ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಿಂದ ಮಾದಕ ವಸ್ತು ರಾಜ್ಯಕ್ಕೆ ಪೂರೈಕೆ ಆಗುತ್ತಿದೆ. ಇದನ್ನು ತಡೆಯಲು ಹೊಸ ಕಾರ್ಯತಂತ್ರ ರೂಪಿಸುತ್ತಿದ್ದೇವೆ'' ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆ; ಪೇನ್ ಕಿಲ್ಲರ್ ಮಾತ್ರೆ ನಿಯಂತ್ರಣಕ್ಕೆ‌ ಕ್ರಮ: ಗೃಹ ಸಚಿವ ಪರಮೇಶ್ವರ್ - Drugs Trafficking Control

ABOUT THE AUTHOR

...view details