ಬೆಂಗಳೂರು:ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶುಕ್ರವಾರ (ಇಂದು) ಸರ್ಕಾರಿ ರಜೆ ಘೋಷಣೆ ಮಾಡಿದೆ. ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.
ದೇಶದಮಾಜಿ ಪ್ರಧಾನಮಂತ್ರಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 92 ವರ್ಷದ ಮಾಜಿ ಪ್ರಧಾನಿಯನ್ನು ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲು ಮಾಡಲಾಗಿತ್ತು.
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ನೇತೃತ್ವದ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿ ಮೆಚ್ಚುಗೆ ಗಳಿಸಿದ್ದರು. ದೇಶದ ಆರ್ಥಿಕತೆಯಲ್ಲಿ ವ್ಯಾಪಕ ಸುಧಾರಣೆಗಳನ್ನು ತಂದಿದ್ದರು. ಕಾಂಗ್ರೆಸ್ ನೇತೃತ್ವದಲ್ಲಿ 2004ರಿಂದ 2014ರ ವರೆಗಿನ ಯುಪಿಎ ಸರ್ಕಾರದ ಎರಡು ಅವಧಿಯಲ್ಲಿ ಪ್ರಧಾನ ಮಂತ್ರಿಯಾಗಿದ್ದರು. ಬಳಿಕ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರು, ಈ ವರ್ಷದ ಏಪ್ರಿಲ್ನಲ್ಲಿ ರಾಜಕೀಯದಿಂದ ನಿವೃತ್ತಿ ಹೊಂದಿದ್ದರು.
ಇದನ್ನೂ ಓದಿ: ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಇನ್ನಿಲ್ಲ; ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರಿಂದ ಕಂಬನಿ - MANMOHAN SINGH IS NO MORE
ಕುವೆಂಪು ವಿವಿ ಪರೀಕ್ಷೆ ಮಂದೂಡಿಕೆ:ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ, ಕುವೆಂಪು ವಿಶ್ವವಿದ್ಯಾನಿಲಯದ ವತಿಯಿಂದ ನಡೆಯಬೇಕಿದ್ದ ಇಂದಿನ ಪರೀಕ್ಷೆಯನ್ನು ಮಂದೂಡಲಾಗಿದೆ ಎಂದು ವಿವಿಯ ಪ್ರಕಟಣೆಯಲ್ಲಿ ತಿಳಿಸಿದೆ. ಮನಮೋಹನ್ ಸಿಂಗ್ ಅವರ ಗೌರವಾರ್ಥ ರಾಜ್ಯ ಸರ್ಕಾರ ಸಾರ್ವಜನಿಕ ರಜೆ ಘೋಷಿಸಿರುವುದರಿಂದ ಇಂದು ನಡೆಯಬೇಕಿದ್ದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ Non-NEP ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಉಪಕುಲಸಚಿವ ಡಾ. ಪಿ. ಧರಣಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.