ಬೆಂಗಳೂರು: ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಗುರುವಾರ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅವರು ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಕಳುಹಿಸಿದ್ದರು. ಇದೀಗ ರಾಜ್ಯಪಾಲರು ಬಿ.ನಾಗೇಂದ್ರ ರಾಜೀನಾಮೆಯನ್ನು ಸ್ವೀಕರಿಸಿದ್ದಾರೆ.
ಗುರುವಾರ ಸಂಜೆ ಕಾವೇರಿ ನಿವಾಸಕ್ಕೆ ತೆರಳಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ನಾನು ಸ್ವ ಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಉಲ್ಲೇಖಿಸಿ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದರು.
ಇದಕ್ಕೂ ಮುನ್ನ ವಿಧಾನಸೌಧದಲ್ಲಿ ತುರ್ತು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ಅವರು, ನಾನು ಸ್ವಇಚ್ಛೆಯಿಂದ ರಾಜೀನಾಮೆ ಕೊಡುತ್ತಿದ್ದೇನೆ. ಆತ್ಮಸಾಕ್ಷಿಯಿಂದ ಯಾರದ್ದೂ ಒತ್ತಡ ಇಲ್ಲದೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಸಿಎಂ ಜೊತೆ ಚರ್ಚಿಸಿದಾಗ ನನ್ನ ಮೇಲೆ ಯಾವುದೇ ಒತ್ತಡ ಹಾಕಿಲ್ಲ ಎಂದಿದ್ದರು.