ಬೆಂಗಳೂರು:ಮೂಡಾದಲ್ಲಿ ಕಾನೂನುಬಾಹಿರವಾಗಿ ನಿವೇಶನ ಪಡೆದಿರುವ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ದೂರುದಾರರಾದ ಟಿ.ಜೆ. ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ ಕುಮಾರ್ ಅವರನ್ನ ಬರುವಂತೆ ಸೂಚನೆ ಹಿನ್ನೆಲೆಯಲ್ಲಿ ಇಂದು (ಶನಿವಾರ) ಮೂವರು ರಾಜಭವನಕ್ಕೆ ಬಂದು ಭೇಟಿಯಾದರು.
ದೂರು ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಪತ್ರ ನೀಡಿದರು. ಹೊರಬಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅಬ್ರಹಾಂ ಅವರು, 'ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಸಂತೋಷವಾಗಿದೆ. ಜಯವೆಂದು ಹೇಳುವುದಕ್ಕೆ ಆಗುವುದಿಲ್ಲ. ಒಂದು ಹೆಜ್ಜೆ ಮುಂದಕ್ಕೆ ಹೋಗಿದ್ದೇವೆ ಅಷ್ಟೇ. ನ್ಯಾಯಾಲಯದಲ್ಲಿ ಕಾಗ್ನಿಜೆನ್ಸ್ ಮಾಡಿ ಕೇಳುತ್ತೇವೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1983 ಸೆಕ್ಷನ್ 17 ಎ ಮತ್ತು ಭಾರತೀಯ ಸುರಕ್ಷಾ ಸಂಹಿತೆಯ (ಬಿಎನ್ಎಸ್ಎಸ್) 218 ಅಡಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ನ್ಯಾಯಾಲಯದಿಂದ ಅನುಮತಿ ಪಡೆದು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲು ಮಾಡಿಸಲು ಹೋರಾಟ ನಡೆಸುತ್ತೇನೆ'' ಎಂದರು.