ಮೈಸೂರು:ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು, ಪಿಎಸ್ಐ, ಮೂವರು ಪೊಲೀಸ್ ಸಿಬ್ಬಂದಿ ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಸುಮಾರು 30ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಪೊಲೀಸರು ಪರಿಸ್ಥಿತಿಯನ್ನು ತಹಬದಿಗೆ ತಂದಿದ್ದಾರೆ.
ಹಲ್ಲರೆ ಗ್ರಾಮದಿಂದ ಹುರ ಗ್ರಾಮದ ಕಡೆಗೆ ತೆರಳುವ ರಸ್ತೆಗೆ ಹೆಸರಿಡುವ ಸಲುವಾಗಿ ಒಂದು ಗುಂಪಿನ ಕೆಲವು ಯುವಕರು ಸ್ಥಳೀಯ ಪಂಚಾಯತಿಗೆ ಅರ್ಜಿ ಸಲ್ಲಿಸಿ, ಪಿಡಿಒ ಅವರಿಂದ ಅನುಮತಿ ಪಡೆದುಕೊಂಡಿದ್ದರು. ಆದರೆ ನಾಮಫಲಕ ಅಳವಡಿಸುವುದಕ್ಕೆ ಕಳೆದ ಐದು ದಿನಗಳ ಹಿಂದೆ ಮತ್ತೊಂದು ಗುಂಪಿನ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಹೀಗಾಗಿ ನಾಮಫಲಕ ಅಳವಡಿಕೆ ಮುಂದೂಡಲಾಗಿತ್ತು.