ಬೆಳಗಾವಿ: ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದೇಶಕ್ಕೆ ಮಾದರಿಯಾಗಿದೆ. ರಾಜ್ಯಾದ್ಯಂತ ಗ್ಯಾರಂಟಿ ಯೋಜನೆಗಳ ಸಮಾವೇಶ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಬೆಳಗಾವಿ, ಹುಕ್ಕೇರಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು ಬೆಳಗಾವಿ ಹಾಗೂ ಹುಕ್ಕೇರಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಭೂತರಾಮನಟ್ಟಿಯ ಮುಕ್ತಿಮಠದಲ್ಲಿ ಮಂಗಳವಾರ ನಡೆದ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ ಯೋಜನೆಯಡಿ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್, ಯುವನಿಧಿ ಯೋಜನೆಯಡಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ. ನಿರುದ್ಯೋಗ ಭತ್ಯೆ, ಡಿಪ್ಲೋಮಾ ಪದವೀಧರರಿಗೆ 1500 ರೂ. ನೀಡಲಾಗುತ್ತಿದೆ ಎಂದರು.
ಅದೇ ರೀತಿ ಅನ್ನಭಾಗ್ಯ ಯೋಜನೆ ಯೋಜನೆಯಡಿ ಪ್ರತಿ 5 ಕೆ.ಜಿ ಅಕ್ಕಿ ಹಾಗೂ ಇನ್ನೈದು 5 ಕೆ.ಜಿ ಅಕ್ಕಿ ಬದಲಿಗೆ ಡಿಬಿಟಿ ಮೂಲಕ ಹಣ ಜಮೆ, ಗೃಹ ಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು 2 ಸಾವಿರ ಹಾಗೂ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.