ಬೆಂಗಳೂರು :ಲೋಕಸಭಾ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣಾ ಪ್ರಚಾರದ ಬಳಲಿಕೆ ಮತ್ತು ಪ್ರಜ್ವಲ್ ರೇವಣ್ಣ ಪ್ರಕರಣದಿಂದಾಗಿ ಮಾನಸಿಕ ಒತ್ತಡಕ್ಕೆ ಸಿಲುಕಿದ್ದ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಇದೀಗ ಮೈಂಡ್ ರಿಲೀಫ್ಗಾಗಿ ರೆಸಾರ್ಟ್ ಮೊರೆ ಹೋಗಿದ್ದಾರೆ. ಕುಟುಂಬ ಸಮೇತರಾಗಿ ಪ್ರಕೃತಿ ಮಡಿಲಿನಲ್ಲಿ ಫುಲ್ ರಿಲ್ಯಾಕ್ಸ್ ಮೂಡ್ಗೆ ಜಾರಿದ್ದಾರೆ.
ಇತ್ತೀಚೆಗಷ್ಟೇ ಹೃದಯದ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡು ಕಳೆದ ಎರಡು ತಿಂಗಳಿನಿಂದ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿದ್ದ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಸಾಕಷ್ಟು ಆಯಾಸಗೊಂಡಿದ್ದರು. ಹೀಗಿದ್ದರೂ ವಿಶ್ರಾಂತಿಗೆ ಸಮಯ ಸಿಗದಂತೆ ಪರಿಷತ್ ಚುನಾವಣೆ ಎದುರಾಯಿತು. ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣಾ ಪ್ರಚಾರದ ಮೂಲಕ ಮೈತ್ರಿ ಧರ್ಮ ಪಾಲನೆ ಮಾಡಬೇಕಾದ ಅನಿವಾರ್ಯತೆಯಿಂದ ವಿಶ್ರಾಂತಿ ಬದಲು ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದರು. ಅದರ ನಡುವೆ ಪ್ರಜ್ವಲ್ ರೇವಣ್ಣ ಪ್ರಕರಣದಿಂದಾಗಿ ಮಾನಸಿಕ ಒತ್ತಡಕ್ಕೂ ಒಳಗಾಗಿದ್ದರು. ಆದರೆ, ಪ್ರಚಾರ ಕಾರ್ಯ ಮುಗಿಯುತ್ತಿದ್ದಂತೆ ಹೆಚ್. ಡಿ ಕುಮಾರಸ್ವಾಮಿ ವಿಶ್ರಾಂತಿ ಮೊರೆ ಹೋಗಿದ್ದಾರೆ.
ಕುಟುಂಬದ ಸಮೇತವಾಗಿ ರಾಜ್ಯದ ರೆಸಾರ್ಟ್ ಒಂದಕ್ಕೆ ತೆರಳಿರುವ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ರೇವತಿ ಹಾಗೂ ಮೊಮ್ಮಗ ಚಿ. ಅವ್ಯಾನ್ ದೇವ್ ಜತೆ ರೆಸಾರ್ಟ್ನ ಪ್ರಕೃತಿ ಮಡಿಲಿನಲ್ಲಿ ಕಾಲ ಕಳೆಯುತ್ತಿದ್ದಾರೆ.