ಬೆಂಗಳೂರು:ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗತಿಗೆಟ್ಟ ಸರ್ಕಾರ ಎಂದು ಕಟುವಾಗಿ ಟೀಕೆ ಮಾಡಿರುವ ಅವರು, ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು. ಪರೀಕ್ಷಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮೂಲಕ ಒತ್ತಾಯಿಸಿದ್ದಾರೆ.
ಜನತೆಗೆ 5 ಗ್ಯಾರಂಟಿ ಯೋಜನೆ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರ್ಕಾರ, ಈಗ ಎಸ್ಎಸ್ಎಲ್ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಅಕ್ರಮ ಸುಲಿಗೆಯಲ್ಲಿ 'ಸಿದ್ದಹಸ್ತ'ವಾಗಿರುವ ಸರ್ಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರ್ಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ ಎಂದು ಅವರು ದೂರಿದ್ದಾರೆ.