ಬೆಂಗಳೂರು:ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಸಿಐಡಿ ಠಾಣೆ, ಹೊಳೆನರಸೀಪುರ ಠಾಣೆ, ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾದ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಜನಪ್ರತಿನಿಧಿ ವಿಶೇಷ ನ್ಯಾಯಾಲಯಕ್ಕೆ ಪ್ರಜ್ವಲ್ ರೇವಣ್ಣ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಅರ್ಜಿಗಳ ತರ್ತು ವಿಚಾರಣೆಗೆ ಪ್ರಜ್ವಲ್ ಪರ ವಕೀಲರು ನ್ಯಾಯಾಲಯಕ್ಕೆ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಮೂರು ಪ್ರಕರಣಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ಸಮಯಾವಕಾಶ ಬೇಕು. ತುರ್ತಾಗಿ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿ, ವಿಚಾರಣೆ ಮೇ 31ಕ್ಕೆ ಮುಂದೂಡಿದರು.
ಕಳೆದ ಒಂದು ತಿಂಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ, ಮೇ 31ರಂದು ಬೆಳಗ್ಗೆ 10 ಗಂಟೆಗೆ ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗುವುದಾಗಿ ಹೇಳಿ ಇತ್ತೀಚೆಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮತ್ತೊಂದೆಡೆ, ಅದಕ್ಕೂ ಮುನ್ನವೇ ಪ್ರಜ್ವಲ್ ಅವರನ್ನು ವಶಕ್ಕೆ ಪಡೆದುಕೊಳ್ಳಲು ಎಸ್ಐಟಿ ಪ್ರಯತ್ನಿಸುತ್ತಿದೆ.
ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಇದರ ತನಿಖೆಗಾಗಿ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಈಗಾಗಲೇ ಪ್ರಜ್ವಲ್ ವಿರುದ್ಧ ಬಂಧನದ ವಾರಂಟ್, ಲುಕ್ ಔಟ್ ನೋಟಿಸ್ ಸಹ ಜಾರಿ ಮಾಡಲಾಗಿದೆ. ಅಲ್ಲದೇ, ಬ್ಲ್ಯೂ ಕಾರ್ನರ್ ನೋಟಿಸ್ ಕೂಡ ಜಾರಿಗೊಳಿಸಲಾಗಿದೆ. ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಇದನ್ನೂ ಓದಿ:ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ; ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆಯಲು ಎಸ್ಐಟಿ ಕಾರ್ಯತಂತ್ರ