ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಯ ಹೊಣೆಯನ್ನು ಎಸ್ಐಟಿಗೆ ವಹಿಸಲಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ ಬೆನ್ನಲ್ಲೇ, ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
''ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿಯಿಂದ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ'' ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದರು.
ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ: ಪ್ರಕರಣದ ತನಿಖೆಗೆ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡದಲ್ಲಿ ಸಹಾಯಕ ಪೊಲೀಸ್ ಮಹಾ ನಿರ್ದೇಶಕಿ ಸುಮನ್ ಡಿ. ಪೆನ್ನೇಕರ್, ಮೈಸೂರು ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಅವರನ್ನೊಳಗೊಂಡಂತೆ ಎಸ್ಐಟಿ ತಂಡ ರಚಿಸಲಾಗಿದೆ. ಹಾಗೂ ಈ ಕುರಿತು ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ವರದಿಯಾದ, ವರದಿಯಾಗಲಿರುವ ಪ್ರಕರಣಗಳನ್ನು ಎಸ್ಐಟಿ ತನಿಖೆ ನಡೆಸಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಹಾಸನದಲ್ಲಿ ಕಳೆದೊಂದು ವಾರದಿಂದ ಪೆನ್ ಡ್ರೈವ್ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗಕ್ಕೂ ದೂರು ಸಲ್ಲಿಕೆಯಾಗಿತ್ತು. ಈ ವಿಡಿಯೋಗಳಿಗೆ ಸಂಬಂಧಿಸಿದಂತೆ ವಿಡಿಯೋ ಚಿತ್ರೀಕರಣ ಮಾಡಿದ ವ್ಯಕ್ತಿ ಮತ್ತು ಅದನ್ನು ಸಾರ್ವಜನಿಕಗೊಳಿಸಿದ ವ್ಯಕ್ತಿಯನ್ನು ತನಿಖೆಗೆ ಒಳಪಡಿಸಬೇಕು. ಮಹಿಳೆಯರ ಮಾನಹಾನಿ ಉಂಟು ಮಾಡಿದವರನ್ನು ಶೀಘ್ರವಾಗಿ ಪತ್ತೆ ಹಚ್ಚಲು ವಿಶೇಷ ತನಿಖಾ ತಂಡ ರಚಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ ಸರ್ಕಾರಕ್ಕೆ ಪತ್ರ ಬರೆದಿದ್ದರು.
ಇದನ್ನೂ ಓದಿ:ಚಾಮರಾಜನಗರ: ಮತದಾನ ಬಹಿಷ್ಕರಿಸಿದ್ದ ಗ್ರಾಮದಲ್ಲಿ ಏ.29 ರಂದು ಮರು ಮತದಾನ - re polling