ಬೆಂಗಳೂರು: ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣಗೆ ವಿಚಾರಣಾಧೀನ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದು ಕೋರಿ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಜತೆಗೆ, ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಸತೀಶ್ ಬಾಬು ಅಲಿಯಾಸ್ ಸತೀಶ್ ಬಾಬಣ್ಣ, ಕೆ ಎ ರಾಜಗೋಪಾಲ್, ಹೆಚ್ ಕೆ ಸುಜಯ್, ಹೆಚ್ ಎನ್ ಮಧು, ಎಸ್ ಟಿ ಕೀರ್ತಿ ಜಾಮೀನು ಕೋರಿ ಪ್ರತ್ಯೇಕವಾಗಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಜುಲೈ 19ಕ್ಕೆ ಮುಂದೂಡಿದೆ.
ವಿಚಾರಣೆ ಆರಂಭವಾಗುತ್ತಿದ್ದಂತೆ ವಿಶೇಷ ಸರ್ಕಾರಿ ಅಭಿಯೋಜಕರಾದ ಪ್ರೊ. ರವಿವರ್ಮ ಕುಮಾರ್, ಎಲ್ಲಾ ಅರ್ಜಿಗಳ ಆಕ್ಷೇಪಣೆ ಸಿದ್ಧವಾಗಿದೆ. ನಾವು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ವರದಿಗಾಗಿ ಕಾಯುತ್ತಿದ್ದೇವೆ. ಮುಂದಿನ ಬುಧವಾರದ ವೇಳೆಗೆ ಆಕ್ಷೇಪಣೆ ಸಲ್ಲಿಕೆ ಮಾಡಲಾಗುವುದು. ಜುಲೈ 19ರಂದು ವಿಚಾರಣೆ ಕೈಗೆತ್ತಿಕೊಳ್ಳಬಹುದು ಎಂದರು.