ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸದ ಬಿಬಿಎಂಪಿ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೊರ್ಟ್, ಈ ಸಂಬಂಧ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡು ತೆರವು ಕಾರ್ಯ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ತ್ಯಾಗರಾಜನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸುವಂತೆ ಕೋರಿ ಸ್ಥಳೀಯ ನಿವಾಸಿ ಪ್ರಶಾಂತ್ ರಾವ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಈ ಎಚ್ಚರಿಕೆ ನೀಡಿದೆ. ಬಿಬಿಎಂಪಿ ಸಾರ್ವಜನಿಕರಿಂದ ತೆರಿಗೆ ಸಂಗ್ರಹಿಸುತ್ತಿದೆ. ಸರಿಯಾದ ರಸ್ತೆ, ಪಾದಚಾರಿ ಮಾರ್ಗಗಳಿಗಾಗಿ ತೆರಿಗೆ ಪಾವತಿಸಲಾಗುತ್ತಿದೆ. ಆದರೆ, ಪಾಲಿಕೆ ಪಾದಚಾರಿ ಮಾರ್ಗಗಳ ಸುಧಾರಣೆಗೆ ಎಂದಿಗೂ ಮುಂದಾಗುತ್ತಿಲ್ಲ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.
ಅಲ್ಲದೆ, ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡಿರುವ ಕುರಿತಂತೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ ಎಲ್ಲ ಪಾದಚಾರಿ ಮಾರ್ಗಗಳನ್ನು ತೆರವುಗೊಳಿಸುವ ಸಂಬಂಧ ಆದೇಶವನ್ನು ನೀಡಲಾಗುವುದು. ಈ ಪ್ರಕ್ರಿಯೆ ಯಾರ ವಿರುದ್ಧವೂ ಅಲ್ಲ. ಸಾರ್ವಜನಿಕರಿಗೆ ಸಹಕಾರಿಯಾಗುವುದಕ್ಕಾಗಿ ಮಾತ್ರ ಎಂದು ಪೀಠ ಇದೇ ವೇಳೆ ಸ್ಪಷ್ಟಪಡಿಸಿತು.
ಕೆಲವು ಪಾದಚಾರಿ ಮಾರ್ಗಗಳಲ್ಲಿ ವಾಹನಗಳ ನಿಲುಗಡೆ ಮಾಡಲಾಗುತ್ತಿದೆ. ತಕ್ಷಣ ಎಲ್ಲ ಪಾದಚಾರಿ ಮಾರ್ಗಗಳನ್ನು ತೆರವು ಮಾಡಬೇಕು. ಈ ಸಂಬಂಧ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿ ವಿಚಾರಣೆಯನ್ನು ಫೆಬ್ರುವರಿ 1 ಕ್ಕೆ ಮುಂದೂಡಿತು. ಪಾದಚಾರಿ ಮಾರ್ಗಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಬಿಬಿಎಂಪಿಯೊಂದಿಗೆ ಇತರೆ ಯಾವ ಇಲಾಖೆಗಳು ಭಾಗಿಯಾಗಬಹುದು. ಅವರಿಗೆ ಯಾವ ರೀತಿಯಲ್ಲಿ ನಿರ್ದೇಶನ ನೀಡಬಹುದು ಎಂಬುದರ ಕುರಿತು ತಿಳಿಸುವಂತೆ ಸರ್ಕಾರದ ಪರ ವಕೀಲರಿಗೆ ಕೋರ್ಟ್ ಸೂಚನೆ ನೀಡಿತು.