ಬೆಂಗಳೂರು: ಕೇಂದ್ರದ ನೂತನ ಎನ್ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಅವರು ಗೆಲುವು ಸಾಧಿಸಿದ್ದರಿಂದ ತಮ್ಮ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದರು.
ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದ ಹೆಚ್.ಡಿ.ಕುಮಾರಸ್ವಾಮಿ (ETV Bharat) ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ, ಪರಿಷತ್ ಸದಸ್ಯ ಬೋಜೇಗೌಡರು, ಮಾಜಿ ಎಂಎಲ್‌ಸಿ ಚೌಡರೆಡ್ಡಿ ಉಪಸ್ಥಿತರಿದ್ದರು. ಇದೇ ವೇಳೆ, ಸ್ಪೀಕರ್ ಯು.ಟಿ.ಖಾದರ್ ಅವರು ಕುಮಾರಸ್ವಾಮಿ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.
ಕುಮಾರಸ್ವಾಮಿ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ (ETV Bharat) ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಒಂದು ವಾರದ ಹಿಂದೆಯಷ್ಟೇ ಪ್ರಮಾಣವಚನ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರು, ಇಲಾಖೆಯ ಅಧಿಕಾರ ವಹಿಸಿಕೊಂಡ ನಂತರ ಶುಕ್ರವಾರ ಬೆಂಗಳೂರಿಗೆ ಆಗಮಿಸಿದರು.
ಕೇಂದ್ರ ಸಚಿವರಾದ ಮೇಲೆ ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸಕ್ಕೆ ಆಗಮಿಸಿದ ಅವರನ್ನು, ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಅವರ ಸೊಸೆ ರೇವತಿ ಅವರು ಆರತಿ ಬೆಳಗಿ, ಸಿಹಿ ತಿನ್ನಿಸಿ ಬರಮಾಡಿಕೊಂಡರು. ಮನೆ ಒಳಗೆ ಪ್ರವೇಶ ಮಾಡಿದ ಕುಮಾರಸ್ವಾಮಿ ಅವರ ಮೇಲೆ ಪುಷ್ಪಾರ್ಚನೆ ಮಾಡುವ ಮೂಲಕ ಅವರ ಕುಟುಂಬದವರು ಸಂಭ್ರಮಾಚರಣೆ ಮಾಡಿದರು. ಪತ್ನಿ ಅನಿತಾ ಕುಮಾರಸ್ವಾಮಿ, ಮೊಮ್ಮಗ ಕೇಂದ್ರ ಸಚಿವರಿಗೆ ಸಿಹಿ ತಿನ್ನಿಸಿದರು.
ಇದಕ್ಕೂ ಮುನ್ನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರು, ತಂದೆ ಹೆಚ್.ಡಿ.ದೇವೇಗೌಡರು ಹಾಗೂ ತಾಯಿ ಚೆನ್ನಮ್ಮ ಅವರನ್ನು ಭೇಟಿಯಾಗಿ ಆಶೀರ್ವಾದ ಕೂಡ ಪಡೆದರು. ಅಲ್ಲೂ ಸಹ ಹೆಚ್ಡಿಕೆ ಸಹೋದರಿಯರು ಹಾಗೂ ಅವರ ಕುಟುಂಬದರು ಸಿಹಿ ಹಂಚಿ ಸಂಭ್ರಮಿಸಿದರು.
ಇನ್ನು ಬೊಂಬೆಗಳ ನಾಡು ಚನ್ನಪಟ್ಟಣಕ್ಕೂ ಇಂದು ಭೇಟಿ ನೀಡುವ ಸಾಧ್ಯತೆ ಇದ್ದು, ಕ್ಷೇತ್ರದ ಅಭಿವೃದ್ಧಿಗೆ ಮುನ್ನುಡಿ ಬರೆಯಲಿದ್ದಾರೆ ಎನ್ನಲಾಗುತ್ತಿದೆ. ತಮ್ಮ ಸ್ವ-ಕ್ಷೇತ್ರಕ್ಕೆ ಆಗಮಿಸಲಿರುವ ಹೆಚ್ಡಿಕೆ ಕ್ಷೇತ್ರದಲ್ಲಿ ಕೋಟ್ಯಂತರ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭಕ್ಕೆ ಚಾಲನೆ ನೀಡಲಿದ್ದಾರೆ.
ಇದನ್ನೂ ಓದಿ:ಹೆಚ್‌ಡಿಕೆಯಿಂದ ತೆರವಾಗಲಿರುವ ಚನ್ನಪಟ್ಟಣ ಕ್ಷೇತ್ರ: ರಾಜಕೀಯ ಭವಿಷ್ಯಕ್ಕಾಗಿ ಹಲವರ ಪೈಪೋಟಿ - Channapatna By Election