ಬೆಂಗಳೂರು:ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಕೋರ್ ಕಮಿಟಿಯ ಮಹತ್ವದ ಸಭೆ ನಡೆಸಿದೆ. ಮಂಡ್ಯ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಮಂಡ್ಯ ಜಿಲ್ಲೆಯ ನಾಯಕರ ಜೊತೆ ಸಭೆ ನಡೆಸಿ ಸಂಜೆ ವೇಳೆಗೆ ಅಧಿಕೃತವಾಗಿ ಹೆಸರು ಪ್ರಕಟಿಸುವ ನಿರೀಕ್ಷೆ ಇದೆ.
ಜೆ.ಪಿ.ನಗರದ ನಿವಾಸದಲ್ಲಿ ಇಂದು ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ಜರುಗಿತು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅಭ್ಯರ್ಥಿ ಆಗಲಿದ್ಧಾರೆ. ಕೋಲಾರ ಕ್ಷೇತ್ರದ ಮುಖಂಡರ ಸಭೆ ಇದೆ. ಮೂವರ ಹೆಸರಗಳು ಪ್ರಸ್ತಾಪವಾಗಿವೆ. ಸಭೆ ನಡೆಸಿದ ನಂತರ ಸಂಜೆ ವೇಳೆಗೆ ಮೂರು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ, ನಾನು ಹುಟ್ಟಿದ್ದು ಹಾಸನ ಜಿಲ್ಲೆಯಾದರೂ ನನಗೆ ರಾಜಕೀಯ ಜನ್ಮ ನೀಡಿದ್ದು ರಾಮನಗರ ಜಿಲ್ಲೆ. ಇದನ್ನು ನಾನೂ ಎಂದೂ ಮರೆಯಲ್ಲ. ನನ್ನ ಬಗ್ಗೆ ಅಪನಂಬಿಕೆ ಇಟ್ಟುಕೊಳ್ಳಬೇಡಿ. ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟು ಕೊಡುವುದಿಲ್ಲ. ನಿಮ್ಮ ಜೊತೆ ನಾನಿದ್ದೇನೆ ಎಂದು ಕ್ಷೇತ್ರದ ಕಾರ್ಯಕರ್ತರಿಗೆ ಮನವಿ ಮಾಡಿದ ಹೆಚ್ಡಿಕೆ, ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ತಲೆಕೊಡಲು ಸಿದ್ಧ ಎನ್ನುವ ಮೂಲಕ ಮಂಡ್ಯದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸುಳಿವು ನೀಡಿದರು.
ಈ ಮೊದಲು ಮಂಡ್ಯದಲ್ಲಿ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಅಥವಾ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಬೇಕೆಂದು ತೀರ್ಮಾನ ಮಾಡಿದ್ದೆವು. ಆದರೆ, ನಿಖಿಲ್ ಕುಮಾರಸ್ವಾಮಿ ಸಹ ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಜಿಲ್ಲೆಯ ಕಾರ್ಯಕರ್ತರು ನನ್ನನ್ನು ನಿಲ್ಲುವಂತೆ ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಇಂದು ಸಂಜೆ ಮಂಡ್ಯ ಜಿಲ್ಲೆಯ ಮುಖಂಡರ ಸಭೆ ನಡೆಸಿ ಅಂತಿಮ ತೀರ್ಮಾನ ತಿಳಿಸುತ್ತೇನೆ ಎಂದು ಹೇಳಿದರು.
ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಿಂದ ನಾವು ಮೂರು ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ದೇಶದೆಲ್ಲೆಡೆ ಮೋದಿ ಅಲೆ ಇದೆ. ಹೀಗಾಗಿ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಲಿದ್ದಾರೆ. ಕೋಲಾರ ಹಾಲಿ ಸಂಸದ ಮುನಿಸ್ವಾಮಿ ಹಾಗೂ ಇತರ ಇತರ ಬಿಜೆಪಿ ನಾಯಕರು ಇಂದು ತಮ್ಮನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಅವರು ಸಹ ಬೆಂಬಲ ನೀಡಿದ್ದಾರೆ. ಕೋಲಾರಕ್ಕೆ ಮೂವರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ಅದರಲ್ಲಿ ಒಬ್ಬರ ಹೆಸರನ್ನು ಸಂಜೆಯೊಳಗೆ ಘೋಷಿಸುತ್ತೇವೆ ಎಂದು ತಿಳಿಸಿದರು.