ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ 50 ಬೆಡ್ ಆಯುಷ್ ಆಸ್ಪತ್ರೆಯ ಉಪಕರಣ ಖರೀದಿಗೆ 28 ಲಕ್ಷ ರೂಪಾಯಿ ವೆಚ್ಚದ ಸಿಎಸ್.ಆರ್ ಯೋಜನೆಯ ಪ್ರಕರಣದಲ್ಲಿ ಅವ್ಯವಹಾರವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಧಾನ ಕಾರ್ಯದರ್ಶಿಗಳ ಮಟ್ಟದ ತನಿಖೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆದೇಶ ಹೊರಡಿಸಿದ್ದಾರೆ.
ಈ ಪ್ರಕರಣದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೂಲಂಕಷವಾದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಆದೇಶಿಸಿದ್ದಾರೆ.
ಪ್ರಕರಣ ಕುರಿತಂತೆ ಮಂಗಳೂರು ಜಿಲ್ಲಾ ಆಯುಷ್ ಅಧಿಕಾರಿ ಖುದ್ದು ಸಚಿವರನ್ನ ಭೇಟಿ ಮಾಡಿ ಉದ್ದೇಶಪೂರ್ವಕವಾಗಿ ಆರೋಪಗಳನ್ನ ಹೊರಿಸಲಾಗುತ್ತಿದ್ದು, ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂದು ದೂರಿದ್ದಾರೆ. ಸಾಮಾಜಿಕ ಕಾರ್ಯಕರ್ತರು ಆಯುಷ್ ಆಸ್ಪತ್ರೆಯ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಯಾಗಿದ್ದಾರೆ. ಅನಗತ್ಯ ದೂರುಗಳನ್ನ ಸಲ್ಲಿಸಿ ಅಡ್ಡಿಪಡಿಸುತ್ತಿದ್ದಾರೆ. ಸಿಎಸ್.ಆರ್ ಯೋಜನೆಯ ಮೂಲಕ ಹಣವನ್ನ ತಂದು ಆಯುಷ್ ಆಸ್ಪತ್ರೆಗೆ ಮೂಲಸೌಕರ್ಯ ಒದಗಿಸಲು ಕ್ರಮ ವಹಿಸಲಾಗಿತ್ತು. ಆದರೆ ಅವರು ತಮ್ಮ ವೈಯಕ್ತಿಕ ಹಿತಾಸಕ್ತಿಯ ರಕ್ಷಣೆಗಾಗಿ ಸರ್ಕಾರಿ ಕಾರ್ಯಕ್ಕೆ ಅಡ್ಡಿಯುಂಟುಮಾಡಿದ್ದಾರೆ ಎಂದು ದೂರಿದ್ದರು.