ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಆರೋಪ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಗೆ ರಾಜ್ಯ ಸರ್ಕಾರವು ಬುಧವಾರ ಆಕ್ಷೇಪಣೆ ಸಲ್ಲಿಸಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪರವಾಗಿ ವಾದ ಮಂಡಿಸಿದ ಸುಪ್ರೀಂಕೋರ್ಟ್ ಹಿರಿಯ ವಕೀಲ ಕೆ. ವೆಂಕಟರಮಣಿ, ''ರಾಜ್ಯ ಸರ್ಕಾರ ಇನ್ನೂ ಆಕ್ಷೇಪಣೆ ಸಲ್ಲಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ'' ಎಂದು ಪೀಠಕ್ಕೆ ತಿಳಿಸಿದರು.
ಈ ವೇಳೆ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ''ಬುಧವಾರ ಬೆಳಗ್ಗೆ ಆಕ್ಷೇಪಣೆ ಕಚೇರಿಯಲ್ಲಿ ಸಲ್ಲಿಕೆ ಮಾಡಲಾಗಿದೆ'' ಎಂದು ವಿವರಿಸಿದರು.
''ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಬೇಕು'' ಎಂದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಪೀಠಕ್ಕೆ ಮನವಿ ಮಾಡಿದರು. ಮನವಿ ಆಲಿಸಿದ ನ್ಯಾಯಪೀಠ, ''ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 23ರ ಮಧ್ಯಾಹ್ನ ನಡೆಸಲಾಗುವುದು'' ಎಂದು ಹೇಳಿ, ವಿಚಾರಣೆ ಮುಂದೂಡಿತು.
ಇದನ್ನೂ ಓದಿ:ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ವಿರುದ್ಧದ ಪ್ರಕರಣ ರದ್ದು - Siddhasiri Sugar Factory